Mysore
25
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

ಅಮಿತ್‌ ಶಾ ಭೇಟಿ ಮಾಡಿದ ಯದುವೀರ್‌ ಒಡೆಯರ್‌

ಮೈಸೂರು-ಕೊಡಗು ಕ್ಷೇತ್ರದ ಅಭಿವೃದ್ಧಿ ಕುರಿತಂತೆ ಚರ್ಚೆ

ಮೈಸೂರು : ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮೈಸೂರು  ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಇತರೆ ಪ್ರಮುಖ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಂಸದರು, ಮೈಸೂರು-ಕೊಡಗು ಕ್ಷೇತ್ರದ ಸಮಸ್ಯೆಗಳು ಹಾಗೂ ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕಾದ ಬಗ್ಗೆ ಮನವಿ ಮಾಡಲಾಯಿತು ಎಂದರು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಬಿಡುಗಡೆ ಮಾಡುವ ಬಗ್ಗೆ ಗೃಹ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು. ಕೊಡಗಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಆಸ್ತಿಪಾಸ್ತಿ ನಷ್ಟವಾಗಿದೆ. ಇವುಗಳಿಗೆ ಎನ್‌ಡಿಆರ್‌ಎಫ್‌ ಮೂಲಕ ಪರಿಹಾರ ಒದಗಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಲಾಯಿತು ಎಂದು ತಿಳಿಸಿದರು.

ಕೊಡಗು ಜಿಲ್ಲೆಯಾದ್ಯಂತ ಈ ಬಾರಿ ಅತಿ ಹೆಚ್ಚು ಮಳೆಯಾಗಿದೆ. ಇದಕ್ಕಾಗಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಬೇಕು ಇದೇ ಸಂದರ್ಭದಲ್ಲಿ ವಿವರಿಸಲಾಯಿತು ಎಂದು ಯದುವೀರ್‌ ಒಡೆಯರ್‌ ಮಾಹಿತಿ ನೀಡಿದರು.

ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದರೆ, ತಡೆಗೋಡೆಗಳನ್ನು, ರಸ್ತೆಗಳನ್ನು ದುರಸ್ತಿ ಮಾಡಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದೆ. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದರು ಹೇಳಿದರು.

ತಂಬಾಕು ಮತ್ತು ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಮಳೆಯಿಂದ ಆಗಿರುವ ನಷ್ಟಕ್ಕೆ ಪರಿಹಾರ ದೊರಕಿಸಿಕೊಡಬೇಕು ಎಂದು ಗೃಹ ಸಚಿವರಿಗೆ ಮನವರಿಕೆ ಮಾಡಿಕೊಟ್ಟೆ ಎಂದರು.

ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಎಚ್ಚರಿಕೆ ಅಗತ್ಯ

ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಆತಂಕದ ಬಗ್ಗೆ ಗೃಹ ಸಚಿವರಿಗೆ ತಿಳಿಸಲಾಯಿತು. ಈ ವಿಷಯದ ಕುರಿತು ಗೃಹ ಸಚಿವಾಲಯದಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

ಎಲ್ಲ ವಿಷಯಗಳನ್ನು ಕೂಲಂಕಷವಾಗಿ ಆಲಿಸಿದ ಗೃಹ ಸಚಿವ ಅಮಿತ್‌ ಶಾ, ಕಾಲಮಿತಿಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದರು.

Tags:
error: Content is protected !!