Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಸಾರಿಗೆ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಹಿಂಬದಿ ಸವಾರನ ಸ್ಥಿತಿ ಗಂಭೀರ * ಜಕ್ಕನಹಳ್ಳಿ ವೃತ್ತದಲ್ಲಿ ಭೀಕರ ಅಪಘಾತ

ಪಾಂಡವಪುರ: ಮೈಸೂರಿನಿಂದ ತಿಪಟೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ತಾಲ್ಲೂಕಿನ ಜಕ್ಕನಹಳ್ಳಿ ವೃತ್ತದಲ್ಲಿ ಸಂಭವಿಸಿದೆ.
ತಾಲ್ಲೂಕಿನ ಕದಲಗೆರೆ ಗ್ರಾಮದ ಕೆ.ಜೆ.ಭರತ್(೨೬) ಮೃತ ಯುವಕ, ಅದೇ ಗ್ರಾಮದ ನಾಗೇಶ್ ಗಂಭೀರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮೈಸೂರು ಕಡೆಯಿಂದ ತಿಪಟೂರು ಕಡೆಗೆ ವೇಗವಾಗಿ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿಗೆ ಕದಲಗೆರೆ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಬಸಕ್ಕೆ ಬೈಕ್ ಸವಾರ ಭರತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಬೈಕ್‌ನಲ್ಲಿದ್ದ ಮತ್ತೊಬ್ಬ ಯುವಕನಿಗೆ ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು.
ಜಕ್ಕನಹಳ್ಳಿ ವೃತ್ತದ ಬಳಿ ಪದೇಪದೇ ಅಪಘಾತಗಳು ಸಂಭವಿಸುತ್ತಿದ್ದು, ಸರ್ಕಲ್‌ನಲ್ಲಿ ಅಪಘಾತವನ್ನು ತಡೆಗಟ್ಟಲು ಅಗತ್ಯ ಕ್ರಮ ಜರುಗಿಸಬೇಕು. ಇದೀಗ ಮೈಸೂರು-ಬೀದರ್ ಮುಖ್ಯರಸ್ತೆ ಅಭಿವೃದ್ಧಿಗೊಂಡಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್‌ಗಳು ಸೇರಿದಂತೆ ವಾಹನಗಳು ವೇಗವಾಗಿ ಸಂಚರಿಸುತ್ತವೆ. ಇದರಿಂದಾಗಿ ಜಕ್ಕನಹಳ್ಳಿ ಸರ್ಕಲ್‌ನಲ್ಲಿ ಹೆಚ್ಚು ಅಪಘಾತಗಳು ಸಂಭವಿಸಿ, ಸಾವು ನೋವುಗಳು ಸಂಭವಿಸುತ್ತಿವೆ. ಹಾಗಾಗಿ ವೃತ್ತದಲ್ಲಿ ವಾಹನಗಳ ವೇಗಕ್ಕೆ ಬ್ರೇಕ್ ಹಾಕಲು ರಸ್ತೆಯಲ್ಲಿ ಹಂಪ್ಸ್ಸ್ಗಳನ್ನು ಹಾಕಬೇಕೆಂದು ಒತ್ತಾಯಿಸಿ ಸ್ಥಳೀಯರು, ಸಂಬoಧಿಕರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಅಧಿಕಾರಿಗಳು ಆಗಮಿಸಬೇಕೆಂದು ಒತ್ತಾಯಿಸಿದರು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪಾಂಡವಪುರ ಸಿಪಿಐ ಲವಕುಮಾರ್ ಅವರು, ಪ್ರತಿಭಟನಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು. ಬಳಿಕ ಮೃತದೇಹವನ್ನು ಗ್ರಾಮಕ್ಕೆ ತೆಗೆದುಕೊಂಡು ಹೋದರು. ಘಟನೆ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ