ಮೈಸೂರು: ತಾಲೂಕಿನ ಕಡಕೊಳ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಹಾಗೂ ಇತರರು ನಾಳೆ ಬಿಡುಗಡೆಯಾಗುವ ನಿರೀಕ್ಷೆ ಇದೆ. ಗಾಯಾಳುಗಳ ಆರೋಗ್ಯದ ಕುರಿತು ಮುಖ್ಯಮಂತ್ರಿ ಹಾಗೂ ಪ್ರಧಾನಿ ಕಾರ್ಯಾಲಯಕ್ಕೆ ಕ್ಷಣಕ್ಷಣದ ಅಪ್ಡೇಟ್ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಳುಗಳು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಎರಡು ದಿನ ಮೈಸೂರಿನಲ್ಲೇ ವಾಸ್ತವ್ಯ ಹೂಡುವ ಸಾಧ್ಯತೆ ಇದೆ. ಕಾರಿನಲ್ಲಿದ್ದ ಮಗುವಿನ ಕಾಲಿಗೆ ಏಟಾಗಿರುವ ಕಾರಣ ಇಂದು ಹಾಗೂ ನಾಳೆ ಚಿಕಿತ್ಸೆ ಮುಂದುವರಿಯಲಿದೆ. ಸದ್ಯ ಗಾಯಾಳುಗಳು ತುರ್ತು ನಿಗಾ ಘಟಕದಿಂದ ವಾರ್ಡ್‌ಗೆ ಶಿಫ್ಟ್ ಆಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸಚಿವ ನಾರಾಯಣಗೌಡ, ಶಾಸಕ ಜಿ.ಟಿ. ದೇವೇಗೌಡ ಸೇರಿ ಹಲವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.