ಹನೂರು: ಭಾರತ್ ಜೋಡೊ ಪಾದಯಾತ್ರೆಗೆ ಯಶಸ್ಸು ಸಿಗುತ್ತಿರುವುದು ಹಾಗೂ ರಾಹುಲ್‍ಗಾಂಧಿ ಅವರ ಜನಪ್ರಿಯತೆಯನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ದುರುದ್ಧೇಶದ ತಂತ್ರಗಳನ್ನು ರೂಪಿಸುತ್ತಿದ್ದಾರೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ಧ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಹುಲ್‍ಗಾಂಧಿ ಅವರು ಭಾರತವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ, ನಿರುದ್ಯೋಗದ ಸಮಸ್ಯೆಯನ್ನು ಹೊಗಲಾಡಿಸುವ ಸಲುವಾಗಿ ಬೆಲೆ ಏರಿಕೆಯ ಬಗ್ಗೆ ಜನರಲ್ಲಿ ಅರಿವು ಮೂಢಿಸುವ ಸಲುವಾಗಿ ಜೋಡೋ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆಯನ್ನು ಕೈಗೊಳ್ಳಲಾಗಿದೆ. ಈಗಾಗಲೇ ಕೇರಳಕ್ಕೆ ಆಗಮಿಸುವ ರಾಹುಲ್‍ಗಾಂಧಿ ಅವರಿಗೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 20 ಸಾವಿರ ಕಾರ್ಯಕರ್ತರು ಭಾಗವಹಿಸುವುದರ ಮೂಲಕ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಹೀಗಾಗಿ ಬಿಜೆಪಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಆಗಾಗಿ ಕಾಂಗ್ರೆಸ್‍ಗೆ ಕೆಟ್ಟ ಹೆಸರನ್ನು ತರುವ ಉದ್ಧೇಶದಿಂದ ಇನ್ನಿಲ್ಲದ ಸಂಚುಗಳನ್ನು ರೂಪಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಗುಂಡ್ಲುಪೇಟೆಗೆ ಆಗಮಿಸಲಿರುವ ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಸೇರಿದಂತೆ ಇನ್ನಿತರೆ ರಾಜ್ಯ ಮಟ್ಟದ ಹಿರಿಯ ನಾಯಕರು, ಸಂಸದರು, ಶಾಸಕರು ಭಾಗಿಯಾಗಲಿದ್ದಾರೆ. ಬೆಳಗ್ಗೆ 9ಕ್ಕೆ ವೇದಿಕೆ ಕಾರ್ಯಕ್ರಮ ಪ್ರಾರಂಭವಾಗಲಿದೆ. ಬಳಿಕ ಪಾದಯಾತ್ರೆ ನಡೆಯಲಿದೆ. ಬಳಿಕ ಗಿರಿಜನರೊಂದಿಗೆ ಸಂವಾದ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಈ ದಿಸೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದಿಂದ ಕಾರ್ಯಕರ್ತರು ತೆರಳಲು 115 ಬಸ್ ಹಾಗೂ ಇನ್ನಿತರೆ ವಾಹನಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ನಾಯಕರ ಫ್ಲೆಕ್ಸ್‍ಗಳನ್ನು ಕಿಡೀಗೇಡಿಗಳು ಬ್ಲೇಡ್ ಹಾಕಿ ಹರಿದು ಹಾಕಿದ್ದಾರೆ. ಆಗಾಗಿ ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಪ್ಪಿತಸ್ಥರನ್ನು ಬಂಧಿಸುವಂತೆ ಕೂಡಲೇ ಅಗತ್ಯ ಕ್ರಮವಹಿಸಬೇಕು. ಜತೆಗೆ ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮ ವಹಿಸಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.
ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಹರೀಶ್‍ಕುಮಾರ್, ಸುದೇಶ್, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾದೇಶ್, ಮುಖಂಡರಾದ ಚಿಕ್ಕತಮ್ಮಯ್ಯ, ರಂಗಸ್ವಾಮಿ, ಬೂದುಬಾಳು ರಾಜೇಶ್, ಶಂಭುಲಿಂಗ, ರಂಗಧಾಮಚಾರ್ ಹಾಗೂ ಇನ್ನಿತರರಿದ್ದರು.





