Mysore
14
scattered clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಸಮುದಾಯ ಆರೋಗ್ಯ ಅಧಿಕಾರಿಗಳ ಖಾಯಂಗೆ ಒತ್ತಾಯ

ಚಾಮರಾಜನಗರ: ಸಮುದಾಯ ಆರೋಗ್ಯ ಅಧಿಕಾರಿಗಳ ಸೇವೆಯನ್ನು ಖಾಯಂಗೊಳಿಸಬೇಕು ಮತ್ತು ಪ್ರೋತ್ಸಾಹಧನವನ್ನು ಹೆಚ್ಚಳ ಮಾಡಬೇಕು ಎಂದು ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಿ.ಶಂಕರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದ ಎಲ್ಲ ಆರೋಗ್ಯ ಉಪ ಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಯಿತು. ಇವುಗಳ ನಿರ್ವಹಣೆಗೆ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಅಧಿಕಾರಿಗಳ ಜವಾಬ್ದಾರಿ, ಕರ್ತವ್ಯ ಹಾಗೂ ಕಾರ್ಯ ಚಟುವಟಿಕೆ ನಿಭಾಯಿಸಲು ಭಾರತ ಸರ್ಕಾರ ಪ್ರತ್ಯೇಕ ನಿಯಮಾವಳಿಯನ್ನು ರಚಿಸಿ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರನ್ವಯ ಕೇಂದ್ರಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಬೇಕು. ಆದರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ಅಧಿಕಾರಿಗಳನ್ನು ಇತರೆ ಕೆಲಸಗಳಿಗೆ ಬಳಸುತ್ತಿದ್ದಾರೆ ಎಂದು ದೂರಿದರು.
ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ನಮ್ಮಲ್ಲಿ ೮ ಸಾವಿರ ರೂ. ಪ್ರೋತ್ಸಾಹಧನ ವಿತರಿಸಲಾಗುತ್ತಿದೆ. ಇತರೆ ರಾಜ್ಯಗಳಲ್ಲಿ ೧೫ ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ನಮಗೂ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದರೂ ಇಲ್ಲಿಯವರೆಗೆ ಜನ್ ಆರೋಗ್ಯ ಸಮಿತಿಯನ್ನು ರಚಿಸಿಲ್ಲ. ಕೂಡಲೇ ರಚಿಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು. ಕೇಂದ್ರದ ಮುಕ್ತ ನಿಧಿ ಹಾಗೂ ಅಧಿಕಾರಿಗಳ ಅನ್‌ಟೈಡ್ ನಿಧಿಯನ್ನು ಸಕಾಲಕ್ಕೆ ಬಿಡುಗಡೆ ಮಾಡದೆ ಶುಚಿತ್ವ ಕಾಪಾಡಲು ತೊಂದರೆಯಾಗಿದೆ ಎಂದು ದೂರಿದರು.
ನಾಳೆ ಪ್ರತಿಭಟನೆ: ಕೇಂದ್ರಗಳಲ್ಲಿ ಸರಿಯಾಗಿ ಔಷಧಗಳು ಮತ್ತು ಡಯಗ್ನೋಸ್ಟಿಕ್ ವ್ಯವಸ್ಥೆಯಿಲ್ಲ. ಈ ಬಗ್ಗೆ ರಾಜ್ಯಮಟ್ಟದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಇಂತಹ ಧೋರಣೆ ಖಂಡಿಸಿ ನ.೧೮ ರಂದು ರಾಜ್ಯಾದ್ಯಂತ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಎದುರು ಸಾಂಕೇತಿಕ ಧರಣಿ ನಡಸಲಾಗುವುದು ಎಂದು ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!