ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ನೀಡಿದ್ದ ಹೇಳಿಕೆಯನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಗುರುವಾರ ಟ್ವೀಟ್ ಮಾಡಿರುವ ಅಶ್ವಥ್ ನಾರಾಯಣ್ ಅದು ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮಂಡ್ಯದಲ್ಲಿ ಟಿಪ್ಪು –ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ ಎಂದಿದ್ದಾರೆ. ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗವಾಗಿದೆ. ನಾನು ಆಡಿರುವ ಮಾತುಗಳನ್ನು ಆ ಚೌಕಟ್ಟಿನಲ್ಲೇ ನೋಡಬೇಕು. ಇದು ಆರೋಗ್ಯಕರ ಪ್ರಜಾತಂತ್ರಕ್ಕೆ ಅಗತ್ಯವಾಗಿದೆ ಎಂದಿದ್ದಾರೆ.
ಮುಂದುವರಿದು ಟ್ವೀಟ್ ಮಾಡಿರುವ ಅಶ್ವತ್ಥ್ ನಾರಾಯಣ್, ಸಾಂದರ್ಭಿಕವಾಗಿ ಆಡು ಭಾಷೆಯಲ್ಲಿ ಸೋಲಿಸಿ ಎಂಬ ಅರ್ಥದಲ್ಲಿ ಹೇಳಿರುವ ಮಾತನ್ನು ತಮಗೆ ಬೇಕಾದ ಹಾಗೆ ಅರ್ಥೈಸಿಕೊಂಡು, ಮಾತನಾಡುತ್ತಿರುವ ಸಿದ್ದರಾಮಯ್ಯ ಅವರ ಭಾಷಾ ಪ್ರಾವೀಣ್ಯತೆ, ಅವರು ಬಳಸುವ (ಗ್ರಾಮೀಣ!) ಪದಗಳು ಏನೆಂಬುದನ್ನು ರಾಜ್ಯದ ಜನತೆಯೇ ನೋಡಿದೆ. ಅಷ್ಟಕ್ಕೂ, ಟಿಪ್ಪುವಿನಲ್ಲಿರುವ ಕಟುಕತನದ ಮನಸ್ಥಿತಿ ನಮ್ಮ ಮಂಡ್ಯದ ಜನತೆಗೆ ಇಲ್ಲ ಎಂದು ಹೇಳಿದ್ದಾರೆ.
ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು ಸಿದ್ದರಾಮಯ್ಯ ಅವರ ಸಂಸ್ಕೃತಿ ಆಗಿರಬಹುದು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತನ್ನಾಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.