ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಫರ್ಧೆ ಮಾಡಲಿದ್ದು, ಜನವರಿ 15ಕ್ಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಕನಿಷ್ಠ 100 ಕ್ಷೇತ್ರಗಳಲ್ಲಿ ಗಂಭೀರ ಸ್ಪರ್ಧೆ ಮಾಡಲಿದ್ದು, 20 ರಿಂದ 25 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ರಾಜ್ಯದಲ್ಲಿ ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎಂಬುದು ಪಕ್ಷದ ರಾಷ್ಟ್ರೀಯ ನಾಯಕಿ ಮಾಯಾವತಿ ಅವರ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂದ ಅವರು, ತಾವು ಮಳವಳ್ಳಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದು, ಮೈಸೂರು ಜಿಲ್ಲೆಯ ಕೃಷ್ಣರಾಜ, ಪಿರಿಯಾಪಟ್ಟಣ, ನಂಜನಗೂಡು, ತಿ.ನರಸೀಪುರ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಸ್ಪರ್ಧಾಕಾಂಕ್ಷಿಗಳು ಆಯಾಯ ಜಿಲ್ಲಾಧ್ಯಕ್ಷರುಗಳನ್ನು ಸಂಪರ್ಕಿಸಿ,ಡಿ.30ರೊಳಗೆ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಬಹುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್, ಮೈಸೂರು ಜಿಲ್ಲಾಧ್ಯಕ್ಷ ಬಿ.ಆರ್.ಪುಟ್ಟಸ್ವಾಮಿ, ಉಪಾಧ್ಯಕ್ಷ ಶ್ರೀಕಂಠು, ಶಿವಮಾದಯ್ಯ, ಜಾಕೀರ್ ಅಲಿಖಾನ್, ಹೂಟಗಳ್ಳಿ ಶಿವಕುಮಾರ್ ಹಾಜರಿದ್ದರು.





