ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸುವ ನೀಟ್ ಪರೀಕ್ಷೆಯನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ವಿಧಾನಸಭಾ ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರವನ್ನು ಒತ್ತಾಯಿಸಿರುವುದು ಸ್ವಾಗತಾರ್ಹ. ಇತ್ತೀಚೆಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳು ಪ್ರಾಮಾಣಿಕವಾಗಿ ನಡೆಯುತ್ತಿಲ್ಲ. ಪರೀಕ್ಷೆಯಲ್ಲಿಯೂ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಅಕ್ರಮಗಳು ನಡೆದಿದ್ದು, ಕೇಂದ್ರ ತನಿಖಾ ದಳ 12
ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.
ನೀಟ್ ಪರೀಕ್ಷೆಯ ಹಗರಣಗಳು ಬಹುತೇಕ ಉತ್ತರ ಭಾರತದ ರಾಜ್ಯಗಳಲ್ಲಿಯೇ ನಡೆಯುತ್ತಿದ್ದು, ದಕ್ಷಿಣ ಭಾರತದ ರಾಜ್ಯಗಳು ನೀಟ್ ಪರೀಕ್ಷೆಯನ್ನು ರದ್ದು ಮಾಡುವಂತೆ ಒತ್ತಾಯಿಸುತ್ತಿವೆ. ಈಗಾಗಲೇ ನೆರೆಯ ತಮಿಳುನಾಡು ಸರ್ಕಾರವೂ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಕೈಗೊಂಡಿದೆ. ನೀಟ್ ಪರೀಕ್ಷೆ ಜಾರಿಯಾದಾಗಿನಿಂದ ನಮ್ಮ ರಾಜ್ಯಕ್ಕೆ ಲಭಿಸುತ್ತಿರುವ ವೈದ್ಯಕೀಯ ಸೀಟುಗಳ ಸಂಖ್ಯೆಯೂ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಆದ್ದರಿಂದ ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ರದ್ದುಪಡಿಸಬೇಕು. ರಾಜ್ಯ ಸರ್ಕಾರಗಳೇ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಾತಿ ನೀಡುವಂತಾಗಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.