ಬೆಂಗಳೂರು : ಸರ್ಕಾರಿ ಶಾಲೆಯಲ್ಲಿ ಪೋಷಕರು ಮಾಸಿಕವಾಗಿ 1೦೦ ರೂಪಾಯಿ ವಂತಿಗೆ ನೀಡಬೇಕೆಂಬ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಆಯುಕ್ತರು ಹೊರಡಿಸಿರುವ ಸುತ್ತೋಲೆಯನ್ನು ಶನಿವಾರ (ಅ.22) ಸರ್ಕಾರ ವಾಪಸ್ ಪಡೆದುಕೊಂಡಿದೆ. ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ, ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
ಈ ಬಗ್ಗೆ ಶನಿವಾರ ಬೆಳಗ್ಗೆಯಷ್ಟೇ ಪ್ರತಿಕ್ರಿಯೆ ನೀಡಿದ್ದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಈ ಆದೇಶಕ್ಕೂ ತಮಗೆ ಮತ್ತೆ ಮುಖ್ಯಮಂತ್ರಿಗೆ ಸಂಬಂಧವೇ ಇಲ್ಲ ಎಂದು ಹೇಳಿಕೆ ಕೊಟ್ಟಿದ್ದರು. ಆದರೆ, ಸರ್ಕಾರದ ನಡೆಗೆ ವ್ಯಾಪಕ ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಆದೇಶವನ್ನು ವಾಪಸ್ ಪಡೆದುಕೊಳ್ಳಲಾಗಿದೆ. ಆದೇಶವನ್ನು ವಾಪಸ್ ಪಡೆಯುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ನೂತನ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಸರಕಾರದ ಆದೇಶದ ವಿರುದ್ಧ ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿತ್ತು, ಶಿಕ್ಷಣ ತಜ್ಞ ವಿ.ಪಿ ನಿರಂಜನಾರಾಧ್ಯ ಮುಖ್ಯಮಂತ್ತಿಗಳಿಗೆ ಪತ್ರ ಬರೆದಿದ್ದರು, AIDSO ಸಂಘಟನೆ, ಪೋಷಕರು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು, ಈ ಹಿನ್ನಲೆಯಲ್ಲಿ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ.