ಬೆಂಗಳೂರು: ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇದ್ದಂತಹ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಸ್ಪರ್ಧಾತ್ಮಕ ಪರೀಕ್ಷೆ ಬಳಿಕ 1:2ರಂತೆ ದಾಖಲಾತಿಯ ಪರಿಶೀಲನೆಯನ್ನು ಕೂಡ ನಡೆಸಲಾಗಿತ್ತು. ಇದೀಗ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದ್ದು, ಈ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ರಾಜ್ಯದ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿಯನ್ನು ಗಮನದಲ್ಲಿಟ್ಟು ಕೆಲಸ ಮಾಡುತ್ತಿದೆ. ಅಲ್ಲದೇ ವಿದ್ಯಾರ್ಥಿಗಳು, ಶಿಕ್ಷಕರ ಸ್ನೇಹಿಯಾಗಿ ಭವಿಷ್ಯದ ಶೈಕ್ಷಣಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿದೆ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ನವೆಂವರ್ 14ರಂದು 7,601 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಶುಕ್ರವಾರ (ನವೆಂವರ್ 18) 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧಿಸಿದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 15,000 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಅದರಲ್ಲಿ 13,363 ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ಶಿಕ್ಷಕರ ನೇಮಕಾತಿಯಲ್ಲಿ ಶೇಕಡಾ 1ರಷ್ಟು ಮೀಸಲಾತಿ ನೀಡಲಾಗಿತ್ತು. ಪ್ರಪ್ರಥಮ ಬಾರಿಗೆ ಮೂವರು ಲಿಂಗತ್ವ ಅಲ್ಪಸಂಖ್ಯಾತರು 1:1 ಪಟ್ಟಿಯಲ್ಲಿ ಆಯ್ಕೆ ಆಗಿದ್ದಾರೆ. ಮೊದಲ ಬಾರಿಗೆ ಅರ್ಹ ಎಂಜಿನಿಯರಿಂಗ್ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. 19 ಜನರು 1:1 ಪಟ್ಟಿಯಲ್ಲಿ ಆಯ್ಕೆ ಆಗಿದ್ದಾರೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.