ಬೆಂಗಳೂರು : ಮಲಯಾಳಂ ಖ್ಯಾತ ನಟ ಮೋಹನ್ ಲಾಲ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಮಲಯಾಳಂ ಮಾತ್ರವೇ ಅಲ್ಲದೆ ಭಾರತದ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಸೆಪ್ಟೆಂಬರ್ 23 ರಂದು ನಡೆಯಲಿರುವ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮೋಹನ್ ಲಾಲ್ ಅವರಿಗೆ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಘೋಷಿಸಿದೆ.
ಫಾಲ್ಕೆ ಪ್ರಶಸ್ತಿ ಗೌರವಕ್ಕೆ ಭಾಜನರಾದ ಮಲಯಾಳಂ ಚಿತ್ರರಂಗದ ಎರಡನೇ ಕಲಾವಿದರು ಮೋಹನ್ಲಾಲ್ ಆಗಿದ್ದಾರೆ. ಈ ಹಿಂದೆ 2004ರ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಮಲಯಾಳಂ ಚಿತ್ರರಂಗದ ಜನಪ್ರಿಯ ನಿರ್ದೇಶಕ ಅಡೂರು ಗೋಪಾಲಕೃಷ್ಣನ್ ಅವರಿಗೆ ನೀಡಲಾಗಿತ್ತು. ಈಗ ಮೋಹನ್ಲಾಲ್ ಅವರಿಗೆ 2023 ರ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ. ಮೋಹನ್ ಲಾಲ್ ಅವರು ಸಿನಿಮಾ ರಂಗಕ್ಕೆ ಸಲ್ಲಿಸಿರುವ ಅಭೂತಪೂರ್ವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
2022ರ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮಿಥಿನ್ ಚಕ್ರವರ್ತಿ ಅವರಿಗೆ ನೀಡಿ ಗೌರವಿಸಲಾಗಿತ್ತು. 2019 ರಲ್ಲಿ ತಮಿಳಿನ ಸೂಪರ್ ಸ್ಟಾರ್ ರಜನೀಕಾಂತ್ ಅವರಿಗೆ ನೀಡಲಾಗಿತ್ತು. ಈಗ ದಕ್ಷಿಣದ ಮತ್ತೊಬ್ಬ ಸೂಪರ್ ಸ್ಟಾರ್ ಆಗಿರುವ ಹಾಗೂ ಅತ್ಯದ್ಭುತ ನಟರಾಗಿರುವ ಮೋಹನ್ ಲಾಲ್ ಅವರಿಗೆ ನೀಡಲಾಗಿದೆ. ಮೋಹನ್ ಲಾಲ್ ಅವರು ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಆಗಿರುವುದಕ್ಕೆ ಹಲವಾರು ಸಿನಿಮಾ ಸೆಲೆಬ್ರಿಟಿಗಳು, ರಾಜಕಾರಣಿಗಳು ಶುಭಾಶಯಗಳನ್ನು ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಮೋಹನ್ಲಾಲ್ ಅವರಿಗೆ ಶುಭಾಶಯ ಕೋರಿದ್ದಾರೆ.





