ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಮತ್ತೆ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ತಿಂಗಳಿನಿಂದಲೂ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.
ಇಂದು ನಟ ದರ್ಶನ್ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ಮನವಿ ಪುರಸ್ಕರಿಸಿದ ನ್ಯಾಯಾಲಯ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ 13 ದಿನಗಳ ಕಾಲ ಅಂದರೆ ಸೆಪ್ಟೆಂಬರ್.9ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಈ ನಡುವೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ನಿನ್ನೆ ಕೋರ್ಟ್ ಆದೇಶ ಹೊರಡಿಸಿತ್ತು.
ಈ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆಗೊಂಡ ಬೆನ್ನಲ್ಲೇ ಇಂದು ಸಂಜೆ ವೇಳೆಗೆ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ. ಶಿರಾ-ತುಮಕೂರು ಮಾರ್ಗವಾಗಿ ಜೈಲು ಅಧಿಕಾರಿಗಳು ಹಾಗೂ ಪೊಲೀಸರು ಬಳ್ಳಾರಿ ಜೈಲಿಗೆ ಕರೆದೊಯ್ಯುತ್ತಾರೆ.





