ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಮುಕ್ತ ಚರ್ಚೆಗೆ ಸಿದ್ಧ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ನೂತನ ʻರಾಷ್ಟ್ರೀಯ ಶಿಕ್ಷಣ ನೀತಿʼ ಕುರಿತು ಮುಕ್ತ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ಯುವಜನತೆ ಭವಿಷ್ಯಕ್ಕಾಗಿ ಕಾಲಕ್ಕೆ ತಕ್ಕಂತೆ ಶಿಕ್ಷಣ ನೀಡಿವುದು ಪೂರಕ. ಇದರಿಂದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಸಾಧ್ಯ. ಈ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳುತ್ತೇವೆ. ನೀತಿ ಜಾರಿಗೂ ಮೊದಲು ಎಲ್ಲ ಕಡೆ ಚರ್ಚೆ ಆಗಿದೆ. ವಿಶ್ವವಿದ್ಯಾಲಯ ಮಟ್ಟದಲ್ಲೂ ಚರ್ಚೆ ನಡೆದಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಬಗ್ಗೆ ಇನ್ನೊಂದು ಸಮಿತಿ ಮಾಡಿ ಚರ್ಚೆ ಮಾಡುತ್ತೇವೆ. ಈ ಸಂಬಂಧ ಯಾರಿಗೂ ಆತಂಕ ಬೇಡ ಎಂದು ತಿಳಿಸಿದರು.

ಇದಕ್ಕೂ ಮೊದಲು ಎಂಜಿನಿಯರ್‌ಗಳ ದಿನಾಚರಣೆ ಅಂಗವಾಗಿ ಕೆ.ಆರ್.ವೃತ್ತದ ಬಳಿ ಇರುವ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆಗೆ ಮುಖ್ಯಮಂತ್ರಿ ಮಾಲಾರ್ಪಣೆ ಮಾಡಿದರು. ಚಂದನ್ ಎಂಬ ಐಟಿಐ ಪದವೀಧರನಿಂದಲೂ ವಿಶ್ವೇಶ್ವರಯ್ಯ ಪ್ರತಿಮೆಗೆ ಅವರು ಮಾಲಾರ್ಪಣೆ ಮಾಡಿಸಿದರು.

ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಪುಷ್ಪಾರ್ಚನೆ ಮಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಮುಖ್ಯಮಂತ್ರಿ ಚಾಲನೆ ನೀಡಿದರು.

× Chat with us