ಬೆಂಗಳೂರು-ರಾಜ್ಯದಲ್ಲಿ ನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಪ್ರಾಥಮಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಐಹೊಳೆ ಡಿ.ಮಹಾಲಿಂಗಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜನತೆಯ ಬೇಡಿಕೆಯಂತೆ ನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಿದ್ದು, ಈಗಾಗಲೇ 43 ಕೇಂದ್ರಗಳಿಗೆ ಅನುಮೋದನೆ ನೀಡಲಾಗಿದೆ. ಉಳಿದ 57 ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದು ಬಾಕಿ ಇದೆ ಎಂದರು.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ಹಾಗೂ ರಾಯಭಾಗ ತಾಲ್ಲೂಕಿನಲ್ಲಿ ಎರಡು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.