ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಮತ್ತು ಸಾರ್ವಜನಿಕ ಆರೋಗ್ಯ ಸನ್ನದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ಈ ಕುರಿತು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
ಸಂಜೆ 4.30ಕ್ಕೆ ಸರಿಯಾಗಿ ಉನ್ನತ ಅಧಿಕಾರಿಗಳಿಂದ ಪ್ರಧಾನಿ ಮೋದಿ ಮಾಹಿತಿ ಪಡೆದುಕೊಳ್ಳಲಿದ್ದಾರೆ.
ಈ ವೇಳೆ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಪ್ರಧಾನಿ ಮೋದಿ ಅವಲೋಕನ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚಿನ ಕೆಲವು ದಿನಗಳಿಂದ ಕೆಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ಪ್ರಕರಣ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ದೇಶದಲ್ಲಿ ಬುಧವಾರ ಹೊಸದಾಗಿ 1,134 ಕೋವಿಡ್ ಪ್ರಕರಣ ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,026ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.