ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ ಘಟನೆ ಯಾವ ರೀತಿ ನಡೆದಿರುವುದು ಎಂದು ಎಲ್ಲರಿಗೂ ಗೊತ್ತಿದೆ. ಹೀಗಾಗಿ ಈ ಘಟನೆಯಿಂದ ಭಾರತೀಯರೆಲ್ಲರೂ ಒಗ್ಗಟ್ಟಾಗಬೇಕಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಜನತೆಗೆ ಸಲಹೆ ನೀಡಿದ್ದಾರೆ.
ದೇಶದ ಆಂತರಿಕ ಭದ್ರತೆ ಕುರಿತು ಕಾಂಗ್ರೆಸ್ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು, ಪಾಕಿಸ್ತಾನದ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಮುಂದಾಗಿದೆ. ಈ ಬೆಳವಣಿಗೆ ಮಧ್ಯೆ ಆಂತರಿಕ ಭದ್ರತೆ ಬಗ್ಗೆ ಕಾಂಗ್ರೆಸ್ ಆರೋಪ ಮಾಡುವುದು ಸರಿಯಲ್ಲ. ವೈಫಲ್ಯದ ಕುರಿತು ಎಲ್ಲಾ ರೀತಿಯ ಪರಿಶೀಲನೆ ನಡೆಸಬೇಕು. ಆ ನಂತರದಲ್ಲಿ ಭದ್ರತೆ ಬಗ್ಗೆ ಹೇಳಲಿ.
ನಾವು ಇದಕ್ಕೆ ಕಠಿಣ ಪ್ರತಿಕ್ರಿಯೆ ನೀಡಬೇಕಾಗಿದೆ. ಭದ್ರತೆ ಕುರಿತು ಯಾವುದೇ ರಾಜಿ ಇಲ್ಲ. ಕಾಂಗ್ರೆಸ್‌ನವರಿಗೆ ಆರೋಪ ಮಾಡುವುದಕ್ಕೆ ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ಸಾಕಷ್ಟು ಭಯೋತ್ಪಾದಕ ಚಟುವಟಿಕೆಗಳು ಇದ್ದವೆಂದು ಎಲ್ಲರಿಗೂ ಗೊತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಬೇಡ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಭಾರತೀಯರೆಲ್ಲರೂ ದೇಶದ ಏಕತೆಗೆ ಸಹಕರಿಸಬೇಕು. ಪಾಕಿಸ್ತಾನ ಏನು ಎಂಬುದು ಇಡೀ ವಿಶ್ವಕ್ಕೆ ಗೊತ್ತು. ಪಾಕಿಸ್ತಾನ ಭಯೋತ್ಪಾದಕರನ್ನು ರಕ್ಷಿಸುವ ತಾಣವಾಗಿದೆ. ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ ಕಳುಹಿಸುವ ನಿರ್ಧಾರ ಸರಿಯಾಗಿದೆ ಎಂದು ಕೇಂದ್ರ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.





