ಮೈಸೂರು : ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಆ.12 ರಿಂದ 14 ರವರೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸಮಿತಿ ವತಿಯಿಂದ ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಈ ಹಿಂದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದಾಗ ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡುವ ಗೌರವಧನವನ್ನು ಕ್ರೋಢಿಕರಿಸಿ 10 ಸಾವಿರ ರೂ. ನಿಗದಿ ಮಾಡಿ, ಬಜೆಟ್‌ನಲ್ಲಿ ವಿಶಿಷ್ಟ ಯೋಜನೆಯನ್ನು ಏಪ್ರಿಲ್‌ನಲ್ಲಿ ನೀಡುವುದಾಗಿ ರಾಜ್ಯ ಸರ್ಕಾರದಿಂದ ಭರವಸೆ ನೀಡಲಾಗಿತ್ತು.
ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ ಕನಿಷ್ಠ 10 ಸಾವಿರ ರೂ. ನಿಗದಿಯಾಗಬೇಕು. ಬಿಸಿಯೂಟ ಕಾರ್ಯಕರ್ತೆಯರಿಗೆ ನೀಡಿದಂತೆ 1 ಸಾವಿರ ರೂ. ಪ್ರೋತ್ಸಾಹಧನವನ್ನು ಆಶಾ ಕಾರ್ಯಕರ್ತೆಯರಿಗೂ ನೀಡಬೇಕು. ಆಶಾ ಕಾರ್ಯಕರ್ತೆಯರ ಸಂಖ್ಯೆಯನ್ನು ಕಡಿತಗೊಳಿಸಬಾರದು, ಅವೈಜ್ಞಾನಿಕ ಕಾರ್ಯನಿರ್ವ ಹಣಾ ಮೌಲ್ಯಮಾಪನ ಕೈಬಿಡಬೇಕು ಎಂದು ಒತ್ತಾಯಿಸಿದರು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷರಾದ ಭಾಗ್ಯ, ಉಪಾಧ್ಯಕ್ಷರಾದ ಮಣಿಲಾ, ನಗರ ಅಧ್ಯಕ್ಷರಾದ ಕೋಮಲ, ಜಿಲ್ಲಾ ಸಲಹೆಗಾರ್ತಿ ಪಿ.ಎಸ್.ಸಂಧ್ಯಾ, ಪವಿತ್ರಾ, ಸೀಮಾ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.





