ಮೈಸೂರು: ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್ ಎಚ್.ವಿಶ್ವನಾಥ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮಚಂದ್ರರಾವ್ ಈ ಹಿಂದೆ ಕೇರಳ ಬಸ್‌ನಲ್ಲಿ ಸಿಕ್ಕಿದ್ದ 2 ಕೋಟಿ ಹಣವನ್ನು ಕೊಂಡೊಯ್ದು ಇನ್ಸ್‌ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಿದ್ದ ನಟೋರಿಯಸ್. ಅವರ ಸಾಕು ಮಗಳು ರನ್ಯಾರಾವ್ ಚಿನ್ನಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಪರಿಣಾಮ ರಾಮಚಂದ್ರ ರಾವ್ ಅವರನ್ನು ಅಮಾನತು ಮಾಡಲಾಗಿತ್ತು. ಅಲ್ಲದೇ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಸಹ ಕೇಳಿಬಂದಿತ್ತು. ನ್ಯಾಯ ಕೇಳಲು ಬಂದಿದ್ದ ಮಹಿಳೆಯ ಮೇಲೆ ರಾಮಚಂದ್ರ ರಾವ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾದ ವೀಡಿಯೋ ನನ್ನದಲ್ಲ ಎಂದು ವಾದಿಸಿದ್ದರು. ಆ ನಂತರ ವಿಧಿ ವಿಜ್ಞಾನ ಪ್ರಯೋಗಾಲಯದ ನೀಡಿದ ವರದಿಯಲ್ಲಿ ಆ ವೀಡಿಯೋ ರಾಮಚಂದ್ರರಾವ್ ಅವರದ್ದೇ ಎಂಬುದು ಸಾಬಿತಾದ ಕಾರಣ ಅವರನ್ನು ಸರ್ಕಾರ ಅಮಾನತು ಮಾಡಿತ್ತು. ಇದೀಗ ಏಕಾಏಕಿ ಅವರ ಮೇಲಿನ ಅಮಾನತು ಆದೇಶ ಹಿಂಪಡೆದು ಮತ್ತೆ ಕರ್ತವ್ಯಕ್ಕೆ ನಿಯೋಜಿಸಿರುವುದು ಸರಿಯಲ್ಲ. ಈ ಸರ್ಕಾರದಲ್ಲಿ ನ್ಯಾಯಕ್ಕೆ ಬೆಲೆ ಇಲ್ಲದಂತಾಗಿದೆ. ಗೃಹ ಇಲಾಖೆಯನ್ನು ಪರಮೇಶ್ವರ್ ನಡೆಸುತ್ತಿದ್ದಾರೋ ಅಥವಾ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ನಡೆಸುತ್ತಿದ್ದಾರಾ ಎಂಬ ಅನುಮಾನವಿದೆ. ರಾಮಚಂದ್ರ ರಾವ್ ಮೇಲಿನ ಅಮಾನತು ಆದೇಶ ಹಿಂಪಡೆಯಲು ದೊಡ್ಡ ಮಟ್ಟದ ಕಿಕ್ ಬ್ಯಾಕ್ ಪಡೆದಿರಬಹುದು. ರಾಜ್ಯದಲ್ಲಿ ಯಾವ ಸೀಮೆಯ ಅಧಿಕಾರ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಮೇ.9ಕ್ಕೆ ಚಿತ್ರದುರ್ಗದಲ್ಲಿ ಆಯೋಜಿಸಿರುವ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕಿಡಿಕಾರಿದ ಅವರು, ಪೋಕ್ಸೋ ಕೇಸ್ ಪ್ರಕರಣದ ಆರೋಪಕ್ಕೆ ಯಡಿಯೂರಪ್ಪ ಗುರಿಯಾಗಿದ್ದಾರೆ. ಇದು ಗಂಭೀರ ಪ್ರಕರಣವಾಗಿದೆ. ಆದರೂ ಇದೀಗ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಮುಂದಾಗಿರುವುದು ಸರಿಯಲ್ಲ. ಈ ಎರಡು ಪ್ರಕರಣಗಳು ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿವೆ. ವಕೀಲ ಸಿದ್ದರಾಮಯ್ಯಗೆ ಇದೆಲ್ಲ ಗೊತ್ತಿಲ್ಲವೇ ಎಂದು ಪ್ರಶ್ನೆ ಮಾಡಿದರು.




