ಮೈಸೂರು: ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣಗಳ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದು ಪಕ್ಕಾ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಭವಿಷ್ಯ ನುಡಿದಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾದರಿಯಲ್ಲೇ ರಾಜ್ಯದಲ್ಲೂ ಜೈಲಿನಿಂದಲೇ ಆಡಳಿತ ನಡೆಸುವ ಸ್ಥಿತಿ ಬರಲಿದೆ ಎಂದರು.
ಮುಡಾ ಪ್ರಕರಣದಲ್ಲಿ ಆಗಿರುವ ಹಗರಣದ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿತ್ತು. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಬೇಕಿತ್ತು. ಆದರೆ ಇದ್ಯಾವುದು ಆಗಿಲ್ಲ. ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ಸರ್ಕಾರದಲ್ಲಿ ಅವ್ಯವಹಾರ ಆಗಿದೆ ಎಂದು ಆರೋಪ ಮಾಡುತ್ತಿದ್ದಾರೆ ಅಂತಾ ಕಿಡಿಕಾರಿದರು.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲಿನಿಂದಲೇ ಅಧಿಕಾರ ನಡೆಸುತ್ತಿದ್ದಾರೆ. ನಮ್ಮದು ಏನೂ ಆಗಿಲ್ಲ ಅನ್ನೋ ರೀತಿ ಕಾಂಗ್ರೆಸ್ ಸರ್ಕಾರ ವರ್ತಿಸುತ್ತಿದೆ. ಈ ಬಗ್ಗೆ ನಾವು ರಾಷ್ಟ್ರಪತಿಗಳಿಗೆ ದೂರು ನೀಡುತ್ತೇವೆ ಎಂದರು.
ಇನ್ನು ರಾಜ್ಯದಲ್ಲಿ ಸಾವಿರಾರು ಕೋಟಿ ಹಗರಣ ನಡೆದಿರುವುದರಿಂದ ಇ.ಡಿ ಮೂಲಕ ತನಿಖೆ ನಡೆಸಲು ಒತ್ತಾಯ ಮಾಡುತ್ತೇವೆ. ನ್ಯಾಯ ದೊರಕುವ ತನಕ ಈ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.