ಮೈಸೂರು: ಕಳೆದ ಕೆಲ ದಿನಗಳಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಭಾರೀ ಅಂತರ ಕಾಯ್ದುಕೊಂಡಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು, ಇಂದು ನಡೆದ ದಿಶಾ ಸಭೆಗೂ ಗೈರಾಗುವ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.
ಇಂದು ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ದಿಶಾ ಸಭೆ ಆಯೋಜನೆ ಮಾಡಲಾಗಿತ್ತು. ಈ ಸಭೆಗೆ ಶಾಸಕ ಜಿ.ಟಿ.ದೇವೇಗೌಡ ಗೈರಾಗಿದ್ದು, ಎಚ್‌ಡಿಕೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಆದರೆ ಅವರ ಪುತ್ರ ಹುಣಸೂರು ಶಾಸಕ ಜಿ.ಟಿ.ಹರೀಶ್ ಗೌಡ ಸಭೆಯಲ್ಲಿ ಭಾಗಿಯಾಗಿದ್ದರು.
ಇಂದಿನ ಸಭೆಯಲ್ಲಿ ಸಂಸದ ಯದುವೀರ್ ಒಡೆಯರ್, ಈ ಭಾಗದ ಶಾಸಕರು, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.
ಸಭೆಗೂ ಮುನ್ನ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ್ದ ಎಚ್.ಡಿ.ಕುಮಾರಸ್ವಾಮಿ ಅವರು, ಜಿಟಿಡಿ ಹಾಗೂ ಜೆಡಿಎಸ್ ಪಕ್ಷದ ಸಂಬಂಧ ಒಂದು ತರಹ ಗಂಡ ಹೆಂಡತಿ ಸಂಬಂಧ ಇದ್ದಹಾಗೆ, ಎಲ್ಲವೂ ಸರಿಯಾಗುತ್ತದೆ. ಮುನಿಸು ಇದ್ದ ಮಾತ್ರಕ್ಕೆ ಅವರು ಜೆಡಿಎಸ್ ಪಕ್ಷ ಬಿಟ್ಟು ಕಾಂಗ್ರೆಸ್‌ಗೆ ಹೋಗುತ್ತಾರೆ ಎಂದರ್ಥವಲ್ಲ ಎಂದು ಹೇಳಿದ್ದರು.
ಆದರೆ ಇಂದಿನ ಸಭೆಗೆ ಶಾಸಕ ಜಿ.ಟಿ.ದೇವೇಗೌಡ ಅವರು ಗೈರಾಗಿದ್ದಾರೆ. ಇತ್ತ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಇಂದು ಸುದ್ದಿಗೋಷ್ಠಿ ನಡೆಸಿ ಜೆಡಿಎಸ್‌ನ ಹಲವು ಶಾಸಕರು ನಮ್ಮ ಪಕ್ಷಕ್ಕೆ ಬರಲಿದ್ದಾರೆ ಎಂದು ಹೇಳಿರುವುದು ಭಾರೀ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.