ಮೈಸೂರು: ಬಿಜೆಪಿ ಹಾಗೂ ಆರ್‌ಎಸ್‌ಎಸ್ ಪರವಾಗಿ ಇಡಿ ಕೆಲಸ ಮಾಡುತ್ತಿದ್ದು, ಇಡಿ ವಿರುದ್ಧ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
ಈ ಕುರಿತು ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಕೊಡುವ ಅವಶ್ಯಕತೆ ಏನಿತ್ತು? ವಿಚಾರಣೆ ಹಂತದಲ್ಲಿ ಇರುವಾಗಲೇ ಪತ್ರಿಕಾ ಪ್ರಕಟಣೆ ಕೊಡುವ ಅಗತ್ಯ ಏನಿತ್ತು ಎಂದು ಪ್ರಶ್ನೆ ಮಾಡಿದರು.
ಸಿಎಂ ಪತ್ನಿ ಪಡೆದ ಸೈಟನ್ನು ಈಗಾಗಲೇ ಮುಡಾಗೆ ವಾಪಸ್ ನೀಡಲಾಗಿದೆ. ಹೀಗಿರುವಾಗ ಸಿಎಂ ಸಿದ್ದರಾಮಯ್ಯ ಹೆಸರು ಹೇಳೋದು ಸರಿಯಲ್ಲ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇಡಿಗೆ ತಾಕತ್ತಿದ್ದರೆ ಜಪ್ತಿ ಮಾಡಿದ್ದೇವೆ ಎಂದು ಹೇಳುವ 142 ಸೈಟ್ ಪಟ್ಟಿ ಬಿಡುಗಡೆ ಮಾಡಲಿ. ಇಡಿ ಈ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.