ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನಾನು ಚುನಾವಣೆಗೂ ಮುನ್ನ ಮಾತೊಂದನ್ನು ಹೇಳಿದ್ದೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಜಮೀನಿನಲ್ಲಿದ್ದರೆ ಚೆಂದ, ಧಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಎಂದು ಹೇಳಿದ್ದೆ.
ಅದರಂತೆ ಇಂದು ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೇವೆ. ನಿಮ್ಮ ಋಣ ತೀರಿಸಲು ನಾವು ಇಲ್ಲಿಗೆ ಬಂದಿದ್ದೇವೆ. ತಾಯಿ ಚಾಮುಂಡೇಶ್ವರಿ ಕೃಪೆಯಿಂದಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ ಈಗ ಎಲ್ಲಾ ರಾಜ್ಯಗಳಲ್ಲೂ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಲೇ ಇವೆ. ಮುಂದಿನ ದಿನಗಳಲ್ಲೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
ಇನ್ನು ಕಾಂಗ್ರೆಸ್ ಸರ್ಕಾರ ಬಂದರೆ ಬರಗಾಲ ಎಂದು ಆರೋಪಿಸಿದ್ದರು. ಆದರೆ ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಜೂನ್‌ನಲ್ಲೇ ಕಾವೇರಿ ಮಾತೆಗೆ ಬಾಗಿನ ಸಲ್ಲಿಸಿದ್ದೇವೆ. ನಾಳೆ ಕಬಿನಿಗೆ ಬಾಗಿನ ಸಲ್ಲಿಸಲಿದ್ದೇವೆ ಎಂದು ಹೇಳಿದರು.





