ಮೈಸೂರು: ಎಫ್‌ಐಆರ್ ಟೆನ್ಷನ್ ಮಧ್ಯೆಯೇ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯಪಾಲರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯಪಾಲರು ಆಡಳಿತದಲ್ಲಿ ತಲೆ ಹಾಕಬಾರದು. ರಾಜ್ಯದ ಜನರ ನಮಗೆ 5 ವರ್ಷ ಅಧಿಕಾರ ಕೊಟ್ಟಿದ್ದಾರೆ. ಆಡಳಿತ ನಡೆಸಿ ಅಭಿವೃದ್ಧಿ ಮಾಡಿ ಎಂದಿದ್ದಾರೆ. ನಾನು ಯಾಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನೆ ಮಾಡಿದರು.
ತಪ್ಪು ಮಾಡಿದ್ದರೆ ಮಾತ್ರ ರಾಜೀನಾಮೆ ಕೊಡಬೇಕು. ನಾನು ಯಾವುದೇ ತಪ್ಪು ಮಾಡಿಲ್ಲ, ಹಾಗಾಗಿ ನಾನು ರಾಜೀನಾಮೆ ಕೊಡುವ ಮಾತೇ ಇಲ್ಲ. ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವ ರಾಜಕೀಯ ನಡೆದಿದೆ. ವಿರೋಧ ಪಕ್ಷಗಳಿರುವ ಎಲ್ಲಾ ರಾಜ್ಯಗಳಲ್ಲೂ ರಾಜ್ಯಪಾಲರುಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದರು.