ಮೈಸೂರು: ರಾಜ್ಯ ಸರ್ಕಾರದಿಂದ ನಿರಂತರ ಬೆಲೆ ಏರಿಕೆ ಹಾಗೂ ಮುಸ್ಲಿಂ ಓಲೈಕೆ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಈ ಯಾತ್ರೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಚಾಲನೆ ನೀಡಿದರು.
ಮೊದಲಿಗೆ ನಾಡ ದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಬಿಜೆಪಿ ನಾಯಕರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಆ ಬಳಿಕ ಮೈಸೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಿದರು.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಎಂಎಲ್‌ಸಿ ಸಿ.ಟಿ.ರವಿ, ಮಾಜಿ ಸಚಿವರುಗಳು ಸೇರಿದಂತೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ಯಾತ್ರೆಯುದ್ದಕ್ಕೂ ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ ಬಿಜೆಪಿ ನಾಯಕರು, ಈ ಸರ್ಕಾರ ರೈತ ವಿರೋಧಿ ಹಾಗೂ ಜನವಿರೋಧಿ ಸರ್ಕಾರ ಎಂದು ಕಿಡಿಕಾರಿದರು.
ಇನ್ನು ಈ ಜನಾಕ್ರೋಶ ಯಾತ್ರೆ ಮೇ.3ರವರೆಗೂ ನಡೆಯಲಿದ್ದು, ರಾಜ್ಯ ಸರ್ಕಾರಕ್ಕೆ ಬಿಜೆಪಿ ನಾಯಕರು ಚುರುಕು ಮುಟ್ಟಿಸುವ ಕೆಲಸ ಮಾಡಲಿದ್ದಾರೆ.





