ಮೈಸೂರು: ಜೆಡಿಎಸ್ ಪಕ್ಷ 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬೆಳಿಹಬ್ಬ ಆಚರಣೆ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ಶಾಸಕ ಜಿ.ಡಿ.ಹರೀಶ್ ಗೌಡ ತಿಳಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ಶಾಸಕ ಜಿ.ಡಿ.ಹರೀಶ್ ಗೌಡ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಶಾಸಕ ಜಿ.ಡಿ.ಹರೀಶ್ ಗೌಡ ಮಾತನಾಡಿ, ನಮ್ಮ ಜೆಡಿಎಸ್ ಪಕ್ಷ 25 ವರ್ಷ ಪೂರೈಸಿದೆ. ಹೀಗಾಗಿ ಬೆಳ್ಳಿ ಹಬ್ಬ ಮಾಡಬೇಕು ಎಂದು ಪಕ್ಷದ ಮುಖಂಡರು ತೀರ್ಮಾನ ಮಾಡಿದ್ದೇವೆ. ಹಾಗಾಗಿ ಎಚ್.ಡಿ.ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ಮಾಡಿರುವ ಸಾಧನೆಯನ್ನು ಮನೆ ಮನೆಗೆ ತಲುಪಿಸುವ ತೀರ್ಮಾನವನ್ನು ಪಕ್ಷದ ಕಾರ್ಯಕರ್ತರು ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಮಾಡಿರುವ ಸಾಧನೆಗಳ ಕುರಿತು ಪ್ರತಿ ಮನೆ ಮನೆಗಳಿಗೆ ತಲುಪಿಸುವ ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.
ಮಾಜಿ ಸಚಿವ ಸಾ.ರಾ.ಮಹೇಶ್ ಮಾತನಾಡಿ, ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಮೇಲೆ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ನಮ್ಮ ಪಕ್ಷಕ್ಕೆ 25 ವರ್ಷ ತುಂಬಿದೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಸಾಧನೆ ಬಗ್ಗೆ ಎಲ್ಲರಿಗೂ ಗೊತ್ತಾಗಬೇಕು. ರಾಜ್ಯದ ಎಲ್ಲಾ ಕಡೆ ಬೆಳ್ಳಿ ಹಬ್ಬ ಆಚರಣೆ ಮಾಡುತ್ತಿದ್ದೇವೆ. ಪ್ರಾದೇಶಿಕ ಪಕ್ಷ ಮಾತ್ರವೇ ರಾಜ್ಯದಲ್ಲಿ ಅಭಿವೃದ್ಧಿ ಮಾಡಲು ಸಾಧ್ಯ ಎಂಬುದನ್ನು ಜನರಿಗೆ ತಿಳಿಸಬೇಕು. 21ರಂದು ನಾವು ಮೈಸೂರಿನಲ್ಲಿ ಕಾರ್ಯಕ್ರಮ ಮಾಡುತ್ತೇವೆ. ಬೆಳ್ಳಿಹಬ್ಬದ ಜೊತೆಗೆ ಸ್ಥಳೀಯ ಚುನಾವಣೆಗೂ ಸಹ ಸಜ್ಜಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರಿಗೆ ಹುರುಪು ತುಂಬುತ್ತೇವೆ ಎಂದು ಹೇಳಿದರು.





