ಮೈಸೂರು: ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಚರ್ಚೆಯಲ್ಲಿರುವ ಬಗ್ಗೆ ಎಂಎಲ್‌ಸಿ ಸಿ.ರಾಜೇಂದ್ರ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿದ್ದಾರೆ.
ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಜಣ್ಣ ಪುತ್ರ ಎಂಎಲ್‌ಸಿ ರಾಜೇಂದ್ರ ಅವರು, ಹಳೆ ಮೈಸೂರು ಭಾಗದಲ್ಲಿ ಸಮುದಾಯದ ಮುಖಂಡರನ್ನು ಭೇಟಿ ಮಾಡುತ್ತಿದ್ದಾರೆ. ನಿನ್ನೆಯಷ್ಟೇ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದರ್ಶನ ಪಡೆದಿದ್ದ ರಾಜೇಂದ್ರ, ಇಂದು ಕೂಡ ಹಲವು ಮುಖಂಡರ ಮನೆಗಳಿಗೆ ಭೇಟಿ ನೀಡಿದ್ದಾರೆ.
ಈ ವೇಳೆ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ತಂದೆ ಕೂಡ ಕಾಂಗ್ರೆಸ್‌ನಲ್ಲಿ ಹಿರಿಯ ಸಚಿವರಿದ್ದಾರೆ. ಯೂತ್ ಕಾಂಗ್ರೆಸ್‌ನಿಂದಲೂ ಪಕ್ಷ ಸಂಘಟನೆಯಲ್ಲಿ ದುಡಿದಿದ್ದಾರೆ. ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಪಕ್ಷ ಸಂಘಟನೆ ಮಾಡುತ್ತೇನೆ ಎಂದಿದ್ದಾರೆ. ಅವರ ಜೊತೆ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವರು ಕೂಡ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು. ನಮ್ಮ ತಂದೆಯವರಿಗೆ ಅವಕಾಶ ಕೊಟ್ಟರೆ ಪಕ್ಷವನ್ನ ಇನ್ನಷ್ಟು ಸಂಘಟನೆ ಮಾಡುವ ಕೆಲಸ ಮಾಡುತ್ತೇವೆ ಎಂದು ತಂದೆ ಪರ ಬ್ಯಾಟ್ ಬೀಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯ ನಮ್ಮ ನಾಯಕರು. ಯಾವಾಗಲೂ ಸಿದ್ದರಾಮಯ್ಯ ನಮ್ಮ ನಾಯಕರು ಅಂತಾನೇ ನಾವೆಲ್ಲಾ ಹೇಳೋದು. ಇದರಿಂದ ನಾನು ಹಾಗೂ ನನ್ನ ತಂದೆ ಟಾರ್ಗೆಟ್ ಆಗುತ್ತಿದ್ದೇವೆ ಎಂದು ಹೇಳೋಕೆ ಆಗಲ್ಲ ಎಂದರು.





