ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ವಕ್ತಾರ ಎಂಜಿ ಮಹೇಶ್ ಆಗ್ರಹಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆದಿರುವ ಘಟನೆ ಕಾಂಗ್ರೆಸ್ ಷಡ್ಯಂತ್ರದ ಒಂದು ಭಾಗವಾಗಿದೆ. ಈ ಸರ್ಕಾರದ ಅವಧಿಯಲ್ಲಿ ಆಗಿರುವ ಐದನೇ ಘಟನೆ ಇದಾಗಿದ್ದು, ಬೆಂಗಳೂರಿನ ಡಿಜೆ ಹಳ್ಳಿ, ಕೆಜೆ ಹಳ್ಳಿಯ ಮಾದರಿಯಲ್ಲಿ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆದಿದೆ. ಆದರೂ ಗೃಹ ಸಚಿವರು ಏನು ಮಾತನಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಓಟ್ ಹಾಕಿದ್ದಾರೆ ಎಂದು ಓಲೈಕೆ ಮಾಡುತ್ತಿದ್ದೀರಾ. ಈ ರೀತಿಯ ಘಟನೆ ನಡೆದಿದ್ದರು, ಎನ್‌ಆರ್ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಧ್ವನಿ ಎತ್ತುತ್ತಿಲ್ಲ. ನೀವು ಈ ರೀತಿ ಮಾಡಿದರೆ ನಾವು ಹೆದರುವುದಿಲ್ಲ ಎಂದು ಹರಿಹಾಯ್ದರು.
ಕಾಂಗ್ರೆಸ್ ಸರ್ಕಾರ, ಅಧಿಕಾರಕ್ಕೆ ಬಂದಾಗಿನಿಂದ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಪೊಲೀಸರು ಮಾತ್ರವಲ್ಲದೇ, ಮಾಧ್ಯಮ ಪ್ರತಿನಿಧಿಗಳು ನಿರ್ಭೀತಿಯಿಂದ ಕೆಲಸ ಮಾಡದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಗೃಹ ಸಚಿವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.