Mysore
27
scattered clouds

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಚಾಮುಂಡಿಬೆಟ್ಟಕ್ಕೆ ಬರುವ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಸೂಚನೆ

ಮೈಸೂರು: ಹೊಸ ವರ್ಷಾಚರಣೆ ದಿನದಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ತಾಯಿಯ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ, ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ಸೂಚನೆ ನೀಡಿದ್ದಾರೆ.

ಜಿಲ್ಲಾ ಪಂಚಾಯಿತಿಯಲ್ಲಿ ಇಂದು(ಡಿಸೆಂಬರ್‌.30) ನಡೆದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂಲಭುತ ಸೌಲಭ್ಯಗಳನ್ನು ಒದಗಿಸುವ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಬಂದೋಬಸ್ತ್‌ ವ್ಯವಸ್ಥೆ ಮಾಡಬೇಕು. ಅಲ್ಲದೇ ವಾಹನ ಸಂಚಾರ ನಿಯಂತ್ರಣ ಮಾಡಿ, ಚಾಮುಂಡಿ ಬೆಟ್ಟಕ್ಕೆ ಬರುವ ಎಲ್ಲಾ ಗೇಟ್‌ಗಳಲ್ಲಿ ಪೊಲೀಸ್‌ ಸಿಬ್ಬಂದಿಗಳನ್ನು ನೇಮಿಸಬೇಕು. ಜೊತೆಗೆ ಅಂದಿನ ದಿನ ಆಟೋಗಳ ಪ್ರವೇಶವನ್ನು ನಿರ್ಬಂಧಿಸಬೇಕು ಎಂದು ತಿಳಿಸಿದ್ದಾರೆ.

ಇನ್ನು 2025ರ ಜನವರಿ 1 ರಂದು ಸಾರ್ವಜನಿಕರಿಗೆ ಬೆಳಿಗ್ಗೆ 6.30 ಗಂಟೆಯಿಂದಲೇ ದರ್ಶನಕ್ಕೆ ಅವಕಾಶ ನೀಡುವುದರಿಂದ ತಾವರೆಕೆರೆ ಗೇಟ್‌ಅನ್ನು ತೆರೆಯಲಾಗಿದೆ. ಹಾಗಾಗಿ ದರ್ಶನಕ್ಕೆ ಬರುವ ಭಕ್ತಾದಿಗಳು ಪಾರ್ಕಿಂಗ್‌ ಸ್ಥಳದಿಂದಲೃ ಸರದಿ ಸಾಲಿನಲ್ಲಿ ಚಾಮುಂಡಿ ದೇವಸ್ಥಾನಕ್ಕೆ ಆಗಮಿಸಬೇಕು. ಜೊತೆಗೆ ಬೆಳಿಗ್ಗೆ ತಯಾರು ಮಾಡುವ ಪ್ರಸಾದದ ಗುಣಮಟ್ಟವನ್ನು ಅಧಿಕಾರಿಗಳು ಪರೀಕ್ಷಿಸಿ ಗುಣಮಟ್ಟದ ಪ್ರಮಾಣ ಪತ್ರವನ್ನು ನೀಡಬೇಕು ಎಂದು ಆದೇಶಿಸಿದ್ದಾರೆ.

ಇನ್ನೂ ಚಾಮುಂಡಿ ಬೆಟ್ಟಕ್ಕೆ ಹೊಸ ವರ್ಷದ ದಿನ ಆಟೋ ರಿಕ್ಷಾಗಳಿಗೆ ನಿರ್ಬಂಧಿಸಿರುವ ಕಾರಣ ಕೆಎಸ್‌ಆರ್‌ಟಿಸಿಯ ಅಧಿಕಾರಿಗಳು ಅಗತ್ಯಕ್ಕೆ ಅನುಗುಣವಾಗಿ ಸಾರಿಗೆ ವ್ಯವಸ್ಥೆಯನ್ನು ನಿಯೋಜಿಸಿ ಭಕ್ತಾದಿಗಳಿಂದ ಟಿಕೆಟ್‌ ಪಡೆಯಬೇಕು. ಅದರ ಜೊತೆಗೆ ನಗರದ ಇತರೆ ಪ್ರದೇಶಗಳಿಂದ ಬೆಟ್ಟಕ್ಕೆ, ನಗರ ಬಸ್‌ ನಿಲ್ದಾಣ ಹಾಗೂ ರೈಲ್ವೆ ಸ್ಟೇಷನ್‌ನಿಂದ ನೇರವಾಗಿ ಹೆಚ್ಚಿನ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸಬೇಕು. ಅಲ್ಲದೇ ದಾಸೋಹ ಭವನದಲ್ಲಿ ಭಕ್ತಾದಿಗಳಿಗೆ ಉಚಿತ ಅನ್ನ ದಾಸೋಹ ವ್ಯವಸ್ಥೆಯನ್ನು ಕಲ್ಪಿಸುವವರು ಹಿಂದಿನ ದಿನವೇ ಟ್ಯಾಂಕರ್‌ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ನಿರಂತರವಾಗಿ ನೀರಿನ ಪೂರೈಕೆ ಮಾಡಬೇಕು ಎಂದು ಹೇಳಿದ್ದಾರೆ.

Tags: