ಮೈಸೂರು: ಒಳಮೀಸಲಾತಿ ಜಾರಿ ಮಾಡದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಬಜೆಟ್ ಅಧಿವೇಶನಕ್ಕೆ ಅಡ್ಡಿ ಮಾಡುತ್ತೇವೆ ಎಂದು ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ ವಕೀಲ ಅರುಣ್ ಕುಮಾರ್ ಅವರು, ಸಾಮಾಜಿಕ ನ್ಯಾಯ, ಸಾಮಾಜಿಕ ನ್ಯಾಯ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರು ದಪ್ಪ ಚರ್ಮದವರು. ಕೋರ್ಟ್ ಆದೇಶ ಬಂದು 4 ತಿಂಗಳು ಕಳೆದರೂ ಒಳ ಮೀಸಲಾತಿ ಜಾರಿ ಮಾಡದೇ ಮೀನಾ ಮೇಷ ಎಣಿಸುತ್ತಿದೆ. ಒಳ ಮೀಸಲಾತಿ ಜಾರಿ ಆಗುವವರೆಗೂ ಯಾವುದೇ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಮಾಡಕೂಡದು ಎಂದು ಆಗ್ರಹಿಸಿದ್ದರೂ ಬ್ಯಾಕ್ ಲಾಗ್ ಹುದ್ದೆಗಳ ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಸರ್ಕಾರದ ದ್ವಂದ್ವ ನೀತಿ ವಿರೋಧಿಸಿ ಇದೇ ತಿಂಗಳ.21ರಂದು ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರದ ಎಡಗೈ ಸಮುದಾಯದ ಎಲ್ಲಾ ವಕೀಲರು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಸಾಂಕೇತಿಕ ಧರಣಿ ಹಮ್ಮಿಕೊಂಡಿದ್ದೇವೆ. ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಲಿಲ್ಲ ಅಂದರೆ, ಬೆಂಗಳೂರು ಚಲೋ ಮಾಡಿ ವಿಧಾನಸೌಧ ಮುತ್ತಿಗೆ ಹಾಕಿ ಅಧಿವೇಶನಕ್ಕೆ ಅಡ್ಡಿಪಡಿಸಲಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.





