ಮೈಸೂರು: ಕಳೆದ ಕೆಲ ತಿಂಗಳಿನಿಂದ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಮೈಸೂರು ಮುಡಾ ಹಗರಣ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ.
ಮುಡಾ ಹಗರಣ ಸಂಬಂಧ ತನಿಖೆ ಪೂರ್ಣಗೊಳಿಸಿದ ಲೋಕಾಯುಕ್ತ ಪೊಲೀಸರು ಇಂದು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.
ಮೈಸೂರು ಮುಡಾ ಹಗರಣ ಸಂಬಂಧ ವರದಿ ಸಲ್ಲಿಸಲು ನ್ಯಾಯಾಲಯ ಜನವರಿ.27ರ ಗಡುವು ನೀಡಿತ್ತು. ಆದರೆ ಜನವರಿ.27ರಂದು ನಡೆಯಲಿರುವ ನ್ಯಾಯಾಲಯದ ವಿಚಾರಣೆಗೂ ಮುನ್ನ ಇಂದು ವರದಿಯನ್ನು ಸಲ್ಲಿಸಲಾಗಿದೆ.
ಇನ್ನು ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ವರದಿ ಅಂತಿಮ ವರದಿಯಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಇನ್ನೂ ಹೆಚ್ಚಿನ ವರದಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ಕೋರಲು ಲೋಕಾಯುಕ್ತ ಪೊಲೀಸರು ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮೂಲಗಳ ಪ್ರಕಾರ ಈ ವರದಿಯನ್ನು ಲೋಕಾಯುಕ್ತ ಪೊಲೀಸರ ನೇತೃತ್ವದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಾದ ಎಡಿಜಿಪಿ ಮನೀಶ್ ಖಾರ್ಬಿಕರ್ ಹಾಗೂ ಐಜಿಪಿ ಸುಬ್ರಹ್ಮಣ್ಯರಾವ್ ಅವರು ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.