ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರು ಕೆಲಸ ಬಹಿಷ್ಕರಿಸಿ ನಡೆಸುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ.
ಮೈಸೂರು ಪಾಲಿಕೆ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ಪಾಲಿಕೆ ನೌಕರರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಹಾಗೂ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ನೌಕರರು, ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ ಕರೆ ನೀಡಿರುವ ಹಿನ್ನೆಲೆಯಲ್ಲಿ ನಾವೆಲ್ಲಾ ಕೆಲಸ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ರಾಜ್ಯ ಸರ್ಕಾರಿ ನೌಕರರಿಗೆ ಸಿಗುವ ಸವಲತ್ತುಗಳು ಸ್ಥಳೀಯ ಸಂಸ್ಥೆ ನೌಕರರಿಗೂ ದೊರೆಯಬೇಕು. 7ನೇ ವೇತನ ಆಯೋಗದ ಸೌಲಭ್ಯವನ್ನು ಪಾಲಿಕೆ ನೌಕರರಿಗೂ ವಿಸ್ತರಿಸಬೇಕು. ವೇತನದ ಶೇಕಡಾ.100ರಷ್ಟು ಅನುದಾನವನ್ನು ರಾಜ್ಯ ಹಣಕಾಸು ಆಯೋಗದಿಂದಲೇ ಬಿಡುಗಡೆ ಮಾಡಬೇಕು. ಪಾಲಿಕೆ ನೌಕರರ ನೇಮಕಾತಿ ನಿಯಮಗಳು ತಿದ್ದುಪಡಿಯಾಗಬೇಕು. ರಾಜ್ಯ ಸರ್ಕಾರಿ ನೌಕರರ ದೊರೆಯುವ ಕೆ.ಜಿ.ಐ.ಡಿ, ಜಿಐಎಸ್ ಸೌಲಭ್ಯ, ಜ್ಯೋತಿ ಸಂಜೀವಿನಿ ಯೋಜನೆಯನ್ನು ನಮಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ನಮ್ಮ ಪರಿಷತ್ ವತಿಯಿಂದ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ರೂಪಿಸಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದರು.





