ಮೈಸೂರು: ರಾಯನಕೆರೆ ನೀರು ಸಂಸ್ಕರಣಾ ಘಟಕ ಹಾಗೂ ಘನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಇಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಎಚ್.ಡಿ.ಕೋಟೆ ರಸ್ತೆಯಲ್ಲಿರುವ ರಾಯನಕೆರೆ ನೀರು ಸಂಸ್ಕರಣಾ ಘಟಕದ ಉತ್ತಮ ನಿರ್ವಹಣೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಅವರು, ಮಲಿನ ನೀರು ಎತ್ತುವ ಯಂತ್ರಗಾರಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಜನರಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ನೀರು ಸಂಸ್ಕರಣಾ ಘಟಕದಲ್ಲಿ ಬೆಳೆದಿರುವ ಗಿಡ ಗಂಟೆಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದರು. ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕೆಲಸ ಮಾಡುವವರಿಗೆ ಪ್ರತಿ ತಿಂಗಳು ಆರೋಗ್ಯ ತಪಾಸಣೆ ಹಾಗೂ ಅವರಿಗೆ ಉತ್ತಮವಾದ ಗ್ಲೌಸ್, ಬೂಟ್ ಹಾಗೂ ಮಾಸ್ಕ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಉಮಾ ಶಂಕರ್, ಮೈಸೂರು ತಾಲ್ಲೂಕು ತಹಶಿಲ್ದಾರ್ ಮಹೇಶ್ ಕುಮಾರ್, ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.





