ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಇ.ಡಿ ಅಧಿಕಾರಿಗಳು ಮುಡಾ ಕಚೇರಿಗೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಮುಂದಿನ ದಿನಗಳಲ್ಲಿ ಅಂದರೆ ಈ ವಾರದಲ್ಲೇ ಜಾರಿ ನಿರ್ದೇಶನಾಲಯವು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮುಡಾ ಕಂಟಕ ಎದುರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನು ಮೈಸೂರಿನ ಮುಡಾ ಕಚೇರಿ ಹಾಗೂ ಇತರೆಡೆಗಳಲ್ಲಿ ದಾಳಿ ನಡೆಸುವ ಮೂಲಕ ಇಡಿ ತನಿಖೆ ಮತ್ತಷ್ಟು ಚುರುಕುಗೊಂಡಿದೆ.
14 ನಿವೇಶನಗಳನ್ನು ಸಿಎಂ ಪತ್ನಿ ಪಾರ್ವತಿ ಅವರು ಹಿಂದಿರುಗಿಸಿದ್ದರೂ ಸಿದ್ದರಾಮಯ್ಯ ಕುಟುಂಬಸ್ಥರು ವಿಚಾರಣೆ ಎದುರಿಸುವುದು ಅನಿವಾರ್ಯ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಮುಡಾ ಸಭೆಯಲ್ಲಿ ಭಾಗಿಯಾಗಿದ್ದಾಗಿ ಹೇಳಿರುವುದೇ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರಿಗೆ ದೊಡ್ಡ ಕಂಟಕವಾಗಿದೆ ಎನ್ನಲಾಗಿದ್ದು, ಮುಡಾ ಹಗರಣದ ತಲೆನೋವು ಸಿಎಂಗೆ ಮತ್ತಷ್ಟು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.