ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿ ದಹಿಸಿದ 98 ನೇ ವರ್ಷದ ನೆಪದಲ್ಲಿ ಪ್ರಸ್ತುತ ಸಂವಿಧಾನ ವಿರೋಧಿ ಕೃತ್ಯಗಳ ಕುರಿತಾಗಿ ಚರ್ಚಿಸಲು ಡಿ.25ರಂದು ಬೆಳಿಗ್ಗೆ 10;30ಕ್ಕೆ ಮಾನಸಗಂಗೋತ್ರಿಯ ರಾಣಿಬಹದ್ದೂರ್ ಸಭಾಂಗಣದಲ್ಲಿ ಒಂದು ದಿನದ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್.ಭಾಸ್ಕರ್ ತಿಳಿಸಿದ್ದಾರೆ.
ಸೋಮವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ವಿಚಾರ ಸಂಕಿರಣದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಮಾರಂಭ ಉದ್ಘಾಟಿಸಿ ‘ಸಮಕಾಲೀನ ವಿದ್ಯಮಾನ ಮತ್ತು ಭಾರತದ ಸಂವಿಧಾನ’ ಕುರಿತು ಮಾತನಾಡಲಿದ್ದಾರೆ. ಹಿರಿಯ ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಇದನ್ನು ಓದಿ: ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನ ಕೊಂದ ಪೋಷಕರು
ವಿಚಾರವಾದಿ ಶಿವಸುಂದರ್ ‘ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮನುಸ್ಮತಿ ಸುಟ್ಟಿದ್ದು ಏಕೆ?’ ವಿಚಾರ ಮಂಡಿಸಲಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಡಿ.ಚಂದ್ರಶೇಖರಯ್ಯ, ಲೇಖಕ ಸಿ.ಹರಕುಮಾರ್, ಮೈಸೂರು ವಿವಿ ಸಂಶೋಧಕರ ಸಂಘದ ಉಪಾಧ್ಯಕ್ಷ ಮಲ್ಲೇಶ್ ಬಾಚಹಳ್ಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಹಿರಿಯ ವೈದ್ಯಾಧಿಕಾರಿ ಡಾ.ಎಸ್.ರಂಗನಾಥಯ್ಯ, ಹಿರಿಯ ದಲಿತ ಹೋರಾಟಗಾರ ಹರಿಹರ ಆನಂದಸ್ವಾಮಿ, ಸಂಗೀತ ವಿವಿಯಿಂದ ಗೌರವ ಡಾಕ್ಟರೇಟ್ ಪುರಸ್ಕ ತ ಜನಾರ್ಧನ್(ಜನ್ನಿ), ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಿಮ್ಮಯ್ಯ ಅವರನ್ನು ಅಭಿನಂದಿಸುವುದಾಗಿ ಹೇಳಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್. ಶಿವರಾಂ, ಎಡಿಜಿಪಿ ತಿಮ್ಮಯ್ಯ, ಮುಖಂಡರಾದ ಯೋಗೇಶ್ ಉಪ್ಪಾರ್, ರವಿನಂದನ್, ಎಂ.ವಿ.ಚಂದ್ರಶೇಖರ್, ಮೈಸೂರು ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಸತ್ಯನಾರಾಯಣ ಹಾಜರಿದ್ದರು.





