ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಟ್ರಾಫಿಕ್ ನಿರ್ವಹಣೆ ಮಾಡಲು ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲಿಂದಲೋ ಪೊಲೀಸರನ್ನು ಕರೆಸಿ ಇಲ್ಲಿ ಟ್ರಾಫಿಕ್ ಮಾಡಲು ಬಿಟ್ಟಿದ್ದಾರೆ. ಅವರಿಗೆ ಟ್ರಾಫಿಕ್ ಕಂಟ್ರೋಲ್ ಮಾಡಲು ಸಾಧ್ಯವಾಗುತ್ತಿಲ್ಲ. ಎಲ್ಲಾ ರಸ್ತೆಗಳಲ್ಲೂ ಅದ್ವಾನವಾಗಿದೆ ಎಂದು ಕಿಡಿಕಾರಿದರು.
ಇನ್ನು ಬೆಂಗಳೂರು ಪೊಲೀಸರಿಗೆ ಟ್ರಾಫಿಕ್ ಬಗ್ಗೆ ತುಂಬಾ ಚೆನ್ನಾಗಿ ಗೊತ್ತು. ಆದರೆ ಹೊರಗಡೆಯವರಿಗೆ ಟ್ರಾಫಿಕ್ ಡ್ಯೂಟಿ ಬಗ್ಗೆ ಏನೂ ಗೊತ್ತಿಲ್ಲ. ಹೀಗಾಗಿ ಮೈಸೂರು ಹಾಗೂ ಬೆಂಗಳೂರು ಪೊಲೀಸರಿಗೆ ಟ್ರಾಫಿಕ್ ನಿರ್ವಹಣೆ ಮಾಡಲು ಬಿಡಬೇಕು ಎಂದು ಆಗ್ರಹಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಗರದ ಪ್ರಮುಖ ರಸ್ತೆಗಳನ್ನು ಒನ್ ವೇ ಮಾಡಿದ್ದಾರೆ. ಇದರಿಂದ ವ್ಯಾಪಾರಸ್ಥರಿಗೆ ತುಂಬಾ ತೊಂದರೆಯಾಗಿದೆ. ವ್ಯಾಪಾರಸ್ಥರು ವ್ಯಾಪಾರ ಮಾಡಲು ಕಷ್ಟವಾಗುತ್ತಿದೆ. ಸರಿಯಾಗಿ ಟ್ರಾಫಿಕ್ ಕಂಟ್ರೋಲ್ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.