ಮೈಸೂರು: ರಾಜ್ಯಾದ್ಯಾಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ 7,268 ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಇತ್ಯರ್ಥ ಪಡಿಸಲಾಗಿದೆ.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿತ್ತು.
ನಗರ ಮತ್ತು ತಾಲ್ಲೂಕಿನ ನ್ಯಾಯಾಲಯಗಳಲ್ಲಿ ಒಟ್ಟು 1,22,125 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದವು. ಅವುಗಳ ಪೈಕಿ 21,646 ಪ್ರಕರಣಗಳನ್ನು ಮಾತ್ರ ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು. ಸಂಧಾನಕ್ಕಾಗಿ ತೆಗೆದುಕೊಂಡ ಪ್ರಕರಣಗಳಲ್ಲಿ 7,268 ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗಿದೆ.
ಈ ಬಾರಿ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಕೌಟುಂಬಿಕ ವಿವಾದದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 41 ದಂಪತಿಗಳು ತಮ್ಮ ಮಧ್ಯದ ವ್ಯಾಜ್ಯಗಳನ್ನು ಬಗೆಹರಿಸಿಕೊಂಡು ಒಂದಾಗಿದ್ದಾರೆ.
ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಿ ಸಂಧಾನದ ಮೂಲಕ ಒಟ್ಟು ರೂ.49,66,29,267 ಗಳು ಇತ್ಯರ್ಥವಾಗಿವೆ. ಈ ಯಶಸ್ಸಿಗೆ ಸಹಕರಿಸಿದ ಎಲ್ಲಾ ವಕೀಲರು ಹಾಗೂ ಕಕ್ಷಿಗಾರರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.





