ಮೈಸೂರು: ಪ್ಲಾಸ್ಟಿಕ್ ಮುಕ್ತ ಮೈಸೂರಿಗೆ ಪಾಲಿಕೆ ಅಧಿಕಾರಿಗಳು ಕಠಿಣ ಪರಿಶ್ರಮದಿಂದ ಕೆಲಸ ಮಾಡುತ್ತಿದ್ದು, ಮನೆ ಮನೆಗೆ ತೆರಳಿ ಬಟ್ಟೆ ಬ್ಯಾಗ್ ವಿತರಿಸಿ ಪ್ಲಾಸ್ಟಿಕ್ ಮುಕ್ತ ಮೈಸೂರಿಗೆ ಸಾರ್ವಜನಿಕರು ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.
ನಗರದ ಚಾಮುಂಡಿಪುರಂನಲ್ಲಿ ಕೆಎಂಪಿಕೆ ಟ್ರಸ್ಟ್ ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತದಿನದ ಅಂಗವಾಗಿ ಮನೆ ಮನೆಗೆ ತೆರಳಿ ಪ್ಲಾಸ್ಟಿಕ್ ಬ್ಯಾಗ್ ತ್ಯಜಿಸಿ ಬಟ್ಟೆ ಬ್ಯಾಗ್ ಬಳಸಿ ಘೋಷವಾಕ್ಯದೊಂದಿಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮನೆ ಮನೆಗಳಿಗೆ ಬಟ್ಟೆ ಬ್ಯಾಗ್ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಷರೀಫ್ ಅವರು, ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆಯನ್ನು ಪ್ರತಿಯೊಬ್ಬರೂ ತ್ಯಜಿಸಬೇಕು. ಆ ಮೂಲಕ ಪ್ಲಾಸ್ಟಿಕ್ ಮುಕ್ತ ನಗರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಪಾಲಿಕೆ ಆರೋಗ್ಯ ಅಧಿಕಾರಿ ಡಾ.ವೆಂಕಟೇಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಪೌರಕಾರ್ಮಿಕರು, ನಗರ ಪಾಲಿಕೆ ಅಧಿಕಾರಿಗಳು ಭಾಗಿಯಾಗಿದ್ದರು.