ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಹಿಂದೂ ಜಾಗರಣ ವೇದಿಕೆ ವತಿಯಿಂದ ಚಾಮುಂಡಿ ಚಲೋ ಹಮ್ಮಿಕೊಳ್ಳಲಾಗಿತ್ತು.
ಚಾಮುಂಡಿ ಚಲೋಗೆ ಬಂದ ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಾಪ್ ಸಿಂಹ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಾಪ್ ಸಿಂಹ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ತಾಲಿಬಾನ್ ಸರ್ಕಾರ ನಡೆಸುತ್ತಿದ್ದಾರೆ. ಇದಕ್ಕೆಲ್ಲ ಸಿದ್ದರಾಮಯ್ಯ ಕಾರಣ. ನಾವು ಬೆಟ್ಟಕ್ಕೆ ಹೋಗುವುದಕ್ಕೂ ತಡೆ ಮಾಡುತ್ತಾ ಇದ್ದಾರೆ. ಸಂವಿಧಾನದಲ್ಲಿ ಪ್ರತಿಭಟನೆ ಮಾಡಲು ಹಕ್ಕಿದೆ. ನಮ್ಮ ಹಕ್ಕನ್ನು ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಬಾನು ಮುಷ್ತಾಕ್ ಕನ್ನಡದ ಬಗ್ಗೆ ಬಾವುಟದ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ. ಬಾನು ಮುಷ್ತಾಕ್ ಕ್ಷಮೆ ಕೇಳುವ ಗೋಜಿಗೂ ಹೋಗಲಿಲ್ಲ. ಅವರು ಕ್ಷಮೆ ಕೇಳಿದ್ರೆ ನಾವು ಚಾಮುಂಡಿ ಚಲೋ ಮಾಡುತ್ತಿರಲಿಲ್ಲ. ಪ್ರತಿಭಟನೆಗೆ ಅವಕಾಶ ಕೊಡದೇ ಧ್ವನಿ ಅಡಗಿಸುವ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದಾಗ ಈ ರೀತಿಯ ಘಟನೆಗಳು ನಡೆಯುತ್ತದೆ. ಸಿದ್ದರಾಮಯ್ಯ ಸಿಎಂ ಆಗಿ ಏಳುವರೆ ವರ್ಷ ಆಯ್ತು ಪೂರೈಸಿದ್ದಾರೆ. ನೆನಪಿಟ್ಟುಕೊಳ್ಳುವ ಒಂದು ಕೆಲಸ ಮಾಡಿಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸಗಳು ನಿರಂತರವಾಗಿ ಆಗುತ್ತಿವೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.





