ಮೈಸೂರು: ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಕಾಲಿವುಡ್ ನಟ ಕಮಲ್ ಹಾಸನ್ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ಕನ್ನಡಿಗರ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿವೆ.
ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾಯಿಸಿದ ಕನ್ನಡಪರ ಸಂಘಟನೆ ಕಾರ್ಯಕರ್ತರು, ಕಮಲ್ ಹಾಸನ್ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ತಮಿಳಿನಿಂದ ಕನ್ನಡ ಹುಟ್ಟಿಲ್ಲ. ಕನ್ನಡದಲ್ಲಿ 52 ಅಕ್ಷರಗಳಿವೆ. ತಮಿಳಿನಲ್ಲಿ ಕೇವಲ 18 ಅಕ್ಷರಗಳಿವೆ. ಕನ್ನಡ ತನ್ನದೇ ಆದ ಇತಿಹಾಸ ಹೊಂದಿದೆ. ನಿಮ್ಮ ತಮಿಳಿನಿಂದ ನಮ್ಮ ಕನ್ನಡ ಹುಟ್ಟಿಲ್ಲ. ಈ ಕೂಡಲೇ ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲ ಅಂದರೆ ಅವರ ಥಗ್ ಲೈನ್ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜಸ್ ಲೋಕೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಮಂದಿ ಭಾಗಿಯಾಗಿದ್ದರು





