ಮೈಸೂರು: ಗುಂಡಿ ಬಿದ್ದಿರುವ ರಸ್ತೆಗಳು, ಒಳಚರಂಡಿ ಹಾಗೂ ಮ್ಯಾನ್‌ಹೋಲ್‌ಗಳನ್ನು ದುರಸ್ತಿಪಡಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಜಮಾಯಿಸಿದ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು, ಪಾಲಿಕೆ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಮೈಸೂರಿನಲ್ಲಿ ಗುಂಡಿ ಬಿದ್ದಿರುವ ರಸ್ತೆಗಳಿಂದ ಅಪಘಾತ ಸಂಭವಿಸುತ್ತಿದ್ದು, ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಒಳಚರಂಡಿ ಹಾಗೂ ಮ್ಯಾನ್‌ಹೋಲ್‌ಗಳಿಂದ ಸಮಸ್ಯೆ ಉಂಟಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಗುಂಡಿ ಬಿದ್ದಿರುವ ರಸ್ತೆಗಳನ್ನು ದುರಸ್ತಿ ಪಡಿಸಬೇಕು. ಜೊತೆಗೆ ಒಳಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಸಮಸ್ಯೆ ಬಗೆಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.





