ಮೈಸೂರು: ರೈತರ ಜೀವನಾಡಿ ಕೆಆರ್‌ಎಸ್ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ ಮಾಡಲು ಯೋಜನೆ ರೂಪಿಸಿರುವ ರಾಜ್ಯ ಸರ್ಕಾರದ ವಿರುದ್ಧ ಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, 88 ವರ್ಷಗಳ ಕೆಆರ್‌ಎಸ್ ಡ್ಯಾಂ ಬಳಿ ಯಾವುದೇ ಗಣಿಗಾರಿಕೆ ನಡೆಸಬಾರದು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈಗ ಅಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣ ಮಾಡಿದರೆ ಅಣೆಕಟ್ಟೆಗೆ ಧಕ್ಕೆ ಉಂಟಾಗುತ್ತದೆ. ಯಾವುದೇ ಕಾರಣಕ್ಕೂ ಅಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣ ಮಾಡುವುದು ಬೇಡ. ಅದರ ಬದಲು ಮೇಕೆದಾಟು ಯೋಜನೆ ಕೈಗೆತ್ತಿಕೊಂಡು ನಾಡಿಗೆ ಒಳಿತಾಗುವ ಕೆಲಸ ಮಾಡಿ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ನಾಲ ಬೀದಿ ರವಿ ಮತ್ತು ಬಾಲಕೃಷ್ಣ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಕನ್ನಡಪರ ಸಂಘಟಕರು ಭಾಗಿಯಾಗಿದ್ದರು.





