ಮೈಸೂರು: ಅಂಬೇಡ್ಕರ್ ಬಗ್ಗೆ ಅಮಿತ್ ಶಾ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಜನವರಿ.7 ರಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿಯು ಮೈಸೂರು ಬಂದ್‌ಗೆ ಕರೆ ನೀಡುತ್ತಿದ್ದು, ಸ್ವಯಂ ಪ್ರೇರಿತರಾಗಿ ಎಲ್ಲರೂ ಭಾಗವಹಿಸಬೇಕು ಎಂದು ಮಾಜಿ ಮೇಯರ್ ಪುರುಷೋತ್ತಮ್ ಮನವಿ ಮಾಡಿದ್ದಾರೆ.
ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಇಂದು(ಜನವರಿ.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.
ಅಮಿತ್ ಶಾ ಅವರ ಈ ಹೇಳಿಕೆಯನ್ನು ಖಂಡಿಸಿ ಜನವರಿ.7ರಂದು ಅಂದು ಬೆಳಿಗ್ಗೆ 6 ರಿಂದ ಸಂಜೆ 4 ಗಂಟೆಯವರೆಗೂ ಬಂದ್ ನಡೆಯಲಿದೆ. ಅಲ್ಲದೇ ಈ ಬಂದ್‌ಗೆ ಈಗಾಗಲೇ ವಿವಿಧ ಸಂಘಟನೆಗಳು ಮತ್ತು ಒಕ್ಕೂಟಗಳು ಬೆಂಬಲ ನೀಡಿವೆ. ಹೀಗಾಗಿ ಶಾಲೆ-ಕಾಲೇಜು, ಸಾರಿಗೆ ಸೇವೆ ಹಾಗೂ ವ್ಯಾಪಾರ-ವಹಿವಾಟನ್ನು ಸ್ಥಗಿತಗೊಳಿಸುವ ಮೂಲಕ ಬಂದ್‌ಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ.





