ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು.
ಚಾಮುಂಡೇಶ್ವರಿ ದೇವಸ್ಥಾನದ ಬಳಿ ಜಮಾಯಿಸಿದ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಕೈಯಲ್ಲಿ ಪ್ಲೇ ಕಾರ್ಡ್‌ಗಳನ್ನು ಹಿಡಿದು ವಿವಿಧ ಘೋಷಣೆ ಕೂಗಿ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಪ್ರಸಾದ್ ಯೋಜನೆಯಡಿ ಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಅವರು, ಇವೆಲ್ಲವೂ ಅವೈಜ್ಞಾನಿಕ ಕಾಮಗಾರಿಗಳು. ಇದರಿಂದ ಬೆಟ್ಟದ ಅಸ್ತಿತ್ವಕ್ಕೆ ಧಕ್ಕೆ ತರಲಾಗುತ್ತಿದೆ. ಈ ಕೂಡಲೇ ಸರ್ಕಾರ ಈ ಕಾಮಗಾರಿಗಳನ್ನು ಕೈಬಿಟ್ಟು ಬೆಟ್ಟದ ನೈಸರ್ಗಿಕ ಸೌಂದರ್ಯವನ್ನು ಕಾಪಾಡಲು ಮುಂದಾಗಬೇಕು ಎಂದು ಆಗ್ರಹಿಸಿದರು.





