ಮೈಸೂರು: ನಗರದ ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸೀತಾ ಎಂಬುವವರನ್ನು ಆರೋಪಿಗಳು ಬಲವಂತವಾಗಿ ಎತ್ತಿಕೊಂಡು ಹೋಗಲು ಯತ್ನಿಸಿ, ಲೈಂಗಿಕ ದೌರ್ಜನ್ಯಕ್ಕೆ ಮುಂದಾಗಿದ್ದರು ಎಂದು ದೂರು ನೀಡಲಾಗಿದೆ.
ಸೀತಾ ಅವರು ಪವನ್, ಸುಶೀಲ್, ಹರ್ಷ ಹಾಗೂ ಮುರುಳಿ ಎಂಬ ನಾಲ್ವರು ಯುವಕರ ವಿರುದ್ಧ ಮೇಟಗಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ.
ತಲೆಮರೆಸಿಕೊಂಡಿರುವ ಆರೋಪಿಗಾಗಿ ಹುಡುಕಾಟ ಮುಂದುವರಿದಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೀತಾ ಒತ್ತಾಯಿಸಿದ್ದಾರೆ.





