ಮೈಸೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ದಾಖಲೆ ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿವಂಗತ ದೇವರಾಜ ಅರಸು ಅವರ ದಾಖಲೆಗೂ ಸಮಾನವಾಗಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಸೇವೆ ಸಲ್ಲಿಸಿದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸಂಭ್ರಮದಿಂದ ಆಚರಿಸಿದ ಅಭಿಮಾನಿಗಳು ಹಾಗೂ ಅಹಿಂದ ಮುಖಂಡರು, ಸಿಎಂ ಸಿದ್ದರಾಮಯ್ಯ ಅವರ ನಿವಾಸದ ಬಳಿ ನಾಟಿಕೋಳಿ ಬಿರಿಯಾನಿ ವಿತರಣೆ ಮಾಡಿದರು.
ಸಿದ್ದರಾಮಯ್ಯ ಅವರು ರಾಜ್ಯದ ಸುದೀರ್ಘಾವಧಿಯ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ಅಹಿಂದ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಬಿರಿಯಾನಿ ವಿತರಣೆ ಮಾಡುವ ಮೂಲಕ ತಮ್ಮ ಸಂತಸ ವ್ಯಕ್ತಪಡಿಸಿದರು.
ಈ ವೇಳೆ “ಸಿದ್ದರಾಮಯ್ಯ ಅವರು ಮುಂದುವರಿದು ಐದು ವರ್ಷಗಳ ಕಾಲವೂ ಮುಖ್ಯಮಂತ್ರಿ ಆಗಿರಲಿ” ಎಂದು ಅಭಿಮಾನಿಗಳು ಘೋಷಣೆ ಕೂಗಿದರು. ಜನಪರ ಆಡಳಿತ, ಹಿಂದುಳಿದ ವರ್ಗಗಳ ಪರ ನಿಲುವು ಮತ್ತು ಸಾಮಾಜಿಕ ನ್ಯಾಯದ ಕಾರ್ಯಕ್ರಮಗಳಿಗಾಗಿ ಸಿದ್ದರಾಮಯ್ಯ ಅವರಿಗೆ ಜನಬೆಂಬಲ ಹೆಚ್ಚಾಗಿದೆ ಎಂದು ಕಾರ್ಯಕರ್ತರು ಅಭಿಪ್ರಾಯಪಟ್ಟರು.
ಸಿಎಂ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ರಾಜ್ಯ ಇನ್ನಷ್ಟು ಅಭಿವೃದ್ಧಿಯ ದಿಕ್ಕಿನಲ್ಲಿ ಸಾಗಲಿ ಎಂಬ ಆಶಯವನ್ನು ಅಭಿಮಾನಿಗಳು ವ್ಯಕ್ತಪಡಿಸಿದರು.





