ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ನಡೆಸಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಆರೋಪ ಮಾಡಿದ್ದಾರೆ.
ಮೈಸೂರು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತಿ ಆಯೋಗಕ್ಕೆ ಸ್ನೇಹಮಯಿ ಕೃಷ್ಣ ಲಿಖಿತ ದೂರು ನೀಡಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ತಮ್ಮ ಬಳಿ ಹಲವು ಸಾಕ್ಷ್ಯಾಧಾರಗಳಿದ್ದರೂ, ಹೈಕೋರ್ಟ್‌ಗೆ ಸುಳ್ಳು ವರದಿ ಸಲ್ಲಿಕೆ ಮಾಡಿದ್ದಾರೆ ಎಂದು ಮೂವರು ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸ್ನೇಹಮಯಿ ಕೃಷ್ಣ ಅವರು, ಭ್ರಷ್ಟ ರಾಜಕಾರಣಿ ಸಿದ್ದರಾಮಯ್ಯ ಅವರ ಪ್ರಭಾವಕ್ಕೆ ಒಳಗಾಗಿ ಅಧಿಕಾರಿಗಳು ಸುಳ್ಳು ವರದಿ ಸಲ್ಲಿಸಿದ್ದಾರೆ. ಇಂತಹವರಿಂದ ಭ್ರಷ್ಟಾಚಾರ, ಅಕ್ರಮ ಹಾಗೂ ಅನ್ಯಾಯಗಳನ್ನು ತಡೆಯಲು ಸಾಧ್ಯವಿಲ್ಲ. ಹಾಗಾಗಿ ಇಂತಹ ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.





