ಮೈಸೂರು: 1975 ಜೂನ್ 25ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು, ದೇಶಾದ್ಯಂತ ಘೋಷಿಸಿದ್ದ ತುರ್ತು ಪರಿಸ್ಥಿತಿಯ ಕರಾಳತೆ ತಿಳಿಸಲು ರಾಜ್ಯಾದ್ಯಂತ ಜನಜಾಗೃತಿ ಮೂಡಿಸಲಾಗುವುದು ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶಕ್ಕೆ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿ 50 ವರ್ಷ ಕಳೆದಿದೆ. ಸಂವಿಧಾನದ ವಿರುದ್ಧ ತುರ್ತು ಪರಿಸ್ಥಿತಿ ಘೋಷಣೆ ಮಾಡಿ ಇಡೀ ದೇಶ ಕರಾಳ ದಿನಗಳನ್ನು ಅನುಭವಿಸಿತ್ತು. ತುರ್ತು ಪರಿಸ್ಥಿತಿ ಪ್ರಶ್ನೆ ಮಾಡಿದ ಎಲ್ಲಾ ವಿಪಕ್ಷ ನಾಯಕರನ್ನು ಜೈಲಿಗೆ ಕಳಿಸುವ ಕೆಲಸ ಮಾಡಲಾಗಿತ್ತು. ಅಂತಹ ತುರ್ತು ಪರಿಸ್ಥಿತಿಯ ಕರಾಳತೆಯನ್ನು ಜನರಿಗೆ ತಿಳಿಸುವ ಉದ್ದೇಶದಿಂದ ರಾಜ್ಯಾದ್ಯಂತ ಜನ ಜಾಗೃತಿ ಸಮಾವೇಶಗಳನ್ನು ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಜೂನ್.28ಕ್ಕೆ ಕರಾಳ ದಿನಾಚರಣೆಯನ್ನು ವರುಣಾ ವಿಧಾನಸಭಾ ಕ್ಷೇತ್ರದ ಹದಿನಾರು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎನ್.ಮಹೇಶ್, ಮಾಜಿ ಸ್ಪೀಕರ್ ಬೋಪಯ್ಯ, ಎಸ್ ಮಹಾದೇವಯ್ಯ, ಮಾಜಿ ಶಾಸಕ ಹರ್ಷವರ್ಧನ್ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅಂದಿನ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು ಎಂದು ಮನವಿ ಮಾಡಿದರು.





