ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದು, ಇದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ ಎಂದು ಕಿಡಿಕಾರಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುವಕನೊಬ್ಬ ಹಾಕಿದ ಒಂದು ಸೋಷಿಯಲ್ ಮೀಡಿಯಾ ಪೋಸ್ಟ್ ಸಾಮಾಜಿಕ ಸ್ವಾಸ್ಥ್ಯವನ್ನೇ ಕೆಡಿಸಿದೆ.
ಪೋಸ್ಟ್ ನೋಡುತ್ತಿದ್ದಂತೆ ರೊಚ್ಚಿಗೆದ್ದ ಅನ್ಯಕೋಮಿನ ಯುವಕರು ಉದಯಗಿರಿ ಪೊಲೀಸ್ ಠಾಣೆ ಮುಂದೆ ಕಲ್ಲು ತೂರಾಟ ನಡೆಸಿದ್ದಲ್ಲದೇ, ಹಲವು ಪೊಲೀಸರ ಮೇಲೂ ದಾಳಿ ಮಾಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ. ಪುಂಡರು ಪೊಲೀಸ್ ಠಾಣೆ ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರನ್ನೇ ಗುರಿಯಾಗಿಸಿ ದಾಳಿ ಮಾಡಲಾಗಿದೆ. ಘಟನೆಯಲ್ಲಿ ಹಲವು ಮಂದಿ ಪೊಲೀಸರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲ್ಲು ತೂರಾಟ ನಡೆಸಿರುವ ಕಿಡಿಗೇಡಿಗಳನ್ನು ಆದಷ್ಟು ಬೇಗ ಬಂಧಿಸಬೇಕು. ಅವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.