ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮುಂದೆ ಅನ್ಯ ಕೋಮಿನ ಯುವಕರು ನಡೆಸಿದ ಕಲ್ಲಿನ ದಾಳಿಯಲ್ಲಿ ಇನ್ಸ್‌ಪೆಕ್ಟರ್ ಸೇರಿದಂತೆ 14 ಮಂದಿ ಪೊಲೀಸರಿಗೆ ಗಾಯಗಳಾಗಿವೆ.
ಕಲ್ಲೇಟಿನಿಂದ ಗಾಯಗೊಂಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆ ಸಂಬಂಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕಲ್ಯಾಣಗಿರಿಯ ಸುರೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ್ದಾರೆ.
ಈ ಬಗ್ಗೆ ಪೊಲೀಸ್ ಅಧಿಕೃತ ಫೇಸ್‌ಬುಕ್‌ನಲ್ಲಿ ಮಾಹಿತಿಯನ್ನು ಮೈಸೂರು ನಗರ ಪೊಲೀಸರು ಹಂಚಿಕೊಂಡಿದ್ದಾರೆ.
ಪೋಸ್ಟ್ ವಿಚಾರಕ್ಕೆ ಗಲಾಟೆ ತೆಗೆದಿರುವ ಸ್ಥಳೀಯರು ದಾಂಧಲೆ ಸೃಷ್ಟಿಸಿದ್ದು, ಪೊಲೀಸ್ ಠಾಣೆ ಹಾಗೂ ಪೊಲೀಸ್ ವಾಹನದ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಲ್ಲು ತೂರಾಟ ಮಾಡಿದವರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಉದಯಗಿರಿ ಠಾಣೆ ಸುತ್ತಮುತ್ತ ಇರುವ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಯುವಕರನ್ನು ಮಾರ್ಕ್ ಮಾಡಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಇನ್ನು ಉದಯಗಿರಿ ಪೊಲೀಸ್ ಠಾಣೆಗೆ ಡಿಸಿಪಿಗಳಾದ ಎಂ.ಮುತ್ತುರಾಜ್ ಹಾಗೂ ಎಸ್ ಜಾನ್ಹವಿ ಭೇಟಿ ನೀಡಿ ಪೊಲೀಸರಿಂದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.