ಮೈಸೂರು: ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿರುವುದಕ್ಕೆ ಲಾರಿ ಮಾಲೀಕರು ಹಾಗೂ ಚಾಲಕರ ಮುಷ್ಕರವೇ ತಾಜಾ ಉದಾಹರಣೆ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯ ಅಕ್ಕಿ ಪೂರೈಕೆ ಮಾಡುತ್ತಿರುವ ಲಾರಿಗಳ ಸಾಗಾಣಿಕೆ ವೆಚ್ಚ ಪಾವತಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಿಲ್ಲ.
ಅನ್ನಭಾಗ್ಯ ಅಕ್ಕಿ ಪೂರೈಸುವ ಲಾರಿಗಳ ಸಾಗಾಣಿಕೆ ವೆಚ್ಚ 246 ಕೋಟಿ ಪಾವತಿಸಿಲ್ಲ. ಪರಿಣಾಮ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿ ಮಾಲೀಕರು ಚಾಲಕರು ಮುಷ್ಕರ ಆರಂಭಿಸಿದ್ದಾರೆ. ಇದರಿಂದ ಅನ್ನಭಾಗ್ಯ ಅಕ್ಕಿ ಪೂರೈಸಲು ಸಾಧ್ಯವಾಗಿಲ್ಲ. ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುವ ಲಾರಿ ಚಾಲಕರ ಕುಟುಂಬಗಳಿಗೆ ಅನ್ನಭಾಗ್ಯ ಸಿಗದಂತಾಗಿದೆ. ರಾಜ್ಯ ಸರ್ಕಾರ ದಿವಾಳಿಯಾಗಿರುವುದನ್ನು ಇದು ತೋರಿಸುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನೆನೆಗುದಿಗೆ ಬಿದ್ದಿವೆ. ರಾಜ್ಯ ಸರ್ಕಾರ ಕೂಡಲೇ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿರುವ ಲಾರಿಗಳ ಸಾಗಾಣಿಕೆ ವೆಚ್ಚ ಪಾವತಿಸಬೇಕು ಎಂದು ಆಗ್ರಹಿಸಿದರು.
ಇನ್ನು ಶಾಸಕರ ಅನುದಾನ ಹಂಚಿಕೆಯಲ್ಲೂ ತಾರತಮ್ಯ ಮಾಡಲಾಗಿದೆ. ಮೈಸೂರಿನಲ್ಲಿ ಚಾಮರಾಜ ಹಾಗು ನರಸಿಂಹರಾಜ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ಕೃಷ್ಣರಾಜ ಕ್ಷೇತ್ರಕ್ಕೆ ಯಾವುದೇ ಅನುದಾನವನ್ನು ನೀಡಿಲ್ಲ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬಿಜೆಪಿ ಶಾಸಕ ಇರುವ ಕೃಷ್ಣರಾಜ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡಿಲ್ಲ ಎಂದು ಅಂಕಿ ಅಂಶಗಳ ಸಮೇತ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.





